ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ.. 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

ಕರಾವಳಿಯ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮಲೆನಾಡಿನ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಬಿರುಸುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರಿ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಮುದ್ರ ತೀರದ ನಿವಾಸಿಗಳು ಹಾಗೂ ಮೀನುಗಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇನ್ನೊಂದೆಡೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯ ನಿರೀಕ್ಷೆಯಿದ್ದು, ಈ ನಾಲ್ಕು ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಳೆಯೊಂದಿಗೆ ಬಲವಾದ ಗಾಳಿಯೂ ಬೀಸುವ ಕಾರಣ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಮನವಿ ಮಾಡಿದೆ.

ಭಾರಿ ಮಳೆಯ ಸಮಯದಲ್ಲಿ ದುರ್ಬಲ ಕಟ್ಟಡಗಳು, ವಿದ್ಯುತ್ ಕಂಬಗಳು ಹಾಗೂ ಮರಗಳ ಸಮೀಪ ನಿಲ್ಲುವುದನ್ನು ತಪ್ಪಿಸುವಂತೆ ಸೂಚಿಸಲಾಗಿದೆ. ಅಗತ್ಯವಿದ್ದರೆ ಮಾತ್ರ ಹೊರಗಡೆ ಸಂಚರಿಸಿ, ಸ್ಥಳೀಯ ಆಡಳಿತ ಹಾಗೂ ಹವಾಮಾನ ಇಲಾಖೆಯ ಎಚ್ಚರಿಕೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

Sai Teja | ಸಾಯಿತೇಜ

Sai Teja | ಸಾಯಿತೇಜ ಕಳೆದ 7 ವರ್ಷಗಳ ಡಿಜಿಟಲ್ ಮೀಡಿಯಾ ಅನುಭವ ಹೊಂದಿದ್ದಾರೆ. ಸಾಯಿತೇಜಾ ಅವರು, ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ತಂತ್ರಜ್ಞಾನ ಹಾಗೂ ಬಿಸಿನೆಸ್, ಆಟೋಮೊಬೈಲ್‌ ಕ್ಷೇತ್ರದ ಪತ್ರಿಕೋದ್ಯಮದಲ್ಲಿ ಪರಿಣತಿಯನ್ನು ಹೊಂದಿದ್ದಾರೆ. ಆನ್‌ಲೈನ್‌ ಸುದ್ದಿ ಲೋಕದಲ್ಲಿ ಅಪಾರವಾದ ಜ್ಞಾನವನ್ನು ಹೊಂದಿದ್ದಾರೆ. ಕನ್ನಡ ನ್ಯೂಸ್‌ ನೆಕ್ಸ್ಟ್‌ನಲ್ಲಿ ಉಪ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. More »