ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಕೇವಲ ನಂದಿನಿ ತಿನಿಸು : ಪ್ಲಾಸ್ಟಿಕ್​ ಬಾಟಲಿ ಬಳಕೆಯೂ ನಿಷೇಧ

Plastic bottle banned: ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸಭೆ ಸಮಾರಂಭಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್​ ಬಾಟಲಿಗಳನ್ನು ಬಳಕೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕುಡಿಯುವ ನೀರಿಗಾಗಿ ಬಳಕೆ ಮಾಡುವ ಪ್ಲಾಸ್ಟಿಕ್​ ಬಾಟಲಿಗಳ ಬದಲಾಗಿ ಪರಿಸರ ಸ್ನೇಹಿ ಪರಿಕರಗಳನ್ನು ಬಳಕೆ ಮಾಡುವಂತೆ ಸೂಚನೆ ನೀಡಲಾಗಿತ್ತು. ಇನ್ಮುಂದೆ ಕಟ್ಟುನಿಟ್ಟಾಗಿ ಸರ್ಕಾರದ ಈ ಆದೇಶವನ್ನು ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿ ಪಾಲನೆ ಮಾಡುವಂತೆ ಆದೇಶ ಹೊರಡಿಸಲಾಗಿದೆ.

ಇನ್ನು ಇದರ ಜೊತೆಯಲ್ಲಿ ಕರ್ನಾಟಕದ ಹೆಮ್ಮೆಯ ಕೆಎಂಎಫ್​ ಬ್ರ್ಯಾಂಡ್​ನ ನಂದಿನಿ ಉತ್ಪನ್ನಗಳ ವಿಚಾರವಾಗಿಯೂ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳು ಹಾಗೂ ಇಲಾಖಾ ಸಚಿವರುಗಳ ಸಭೆಯಲ್ಲಿ ಹಾಗೂ ಸಚಿವಾಲಯಗಳೂ ಸೇರಿದಂತೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ನಡೆಯುವ ಸಭೆ ಸಮಾರಂಭಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್(KMF)​ ಬ್ರ್ಯಾಂಡ್​ನ ನಂದಿನಿ ಉತ್ಪನ್ನಗಳನ್ನೇ ಕಡ್ಡಾಯವಾಗಿ ಬಳಕೆ ಮಾಡುವಂತೆ ಆದೇಶ ನೀಡಲಾಗಿದೆ.

Also Read: ಕಿಲ್ಲರ್‌ ಕಾಂಗ್ರೆಸ್‌ ಪೋಸ್ಟರ್‌ : ಸರಕಾರಕ್ಕೆ ಶೋಭಾ ಕರಂದ್ಲಾಜೆ ಟಕ್ಕರ್‌

ಈ ಆದೇಶ ಪ್ರತಿಯನ್ನು ಖುದ್ದು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದು ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರ ಬಳಕೆ ಮಾಡುವಂತೆ ಈ ಹಿಂದೆಯೇ ಸೂಚನೆ ನೀಡಲಾಗಿದ್ದು, ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದು ಮತ್ತು ಮುಖ್ಯಮಂತ್ರಿಗಳ, ಸಚಿವರುಗಳ ಸಭೆಗಳಲ್ಲಿ, ಸರ್ಕಾರದ ಎಲ್ಲಾ ಸಭೆ – ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ನ ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಲು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ ನಂದಿನಿ ಉತ್ಪನ್ನಗಳಿಗೆ ಪ್ರೋತ್ಸಾಹ ಮತ್ತು ಪ್ಲಾಸ್ಟಿಕ್​ ವಸ್ತುಗಳ ಬಳಕೆ ನಿಯಂತ್ರಣಕ್ಕೆ ಮಹತ್ವದ ಕ್ರಮ ಕೈಗೊಂಡಿದೆ.

Exit mobile version