ಪಾದಚಾರಿ ಸುರಕ್ಷತೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಚಿಂತನೆ : ಸಾರಿಗೆ ಸಚಿವರಿಗೆ ಕೃಷ್ಣಬೈರೇಗೌಡ ಪತ್ರ

ಬೆಂಗಳೂರು ನಗರ ಸಂಚಾರಿ ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಇತ್ತೀಚೆಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ತೀವ್ರಗೊಂಡಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪಾದಚಾರಿಗಳ ಹಕ್ಕು ಹಾಗೂ ಸುರಕ್ಷತೆಯನ್ನು ಕಾಪಾಡಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ನಗರದ ಪಾದಚಾರಿ ಮಾರ್ಗಗಳಲ್ಲಿ ದ್ವಿಚಕ್ರ ವಾಹನಗಳನ್ನು ಚಲಾಯಿಸುವ ಸವಾರರಿಗೆ ಸದ್ಯ ವಿಧಿಸಲಾಗುತ್ತಿರುವ ₹500 ದಂಡದ ಮೊತ್ತವನ್ನು ಬರೋಬ್ಬರಿ ₹5,000ಕ್ಕೆ ಹೆಚ್ಚಿಸುವಂತೆ ಸಚಿವ ಕೃಷ್ಣ ಬೈರೇಗೌಡ ಅವರು ಸಾರಿಗೆ ಇಲಾಖೆಗೆ ಮಹತ್ವದ ಪತ್ರ ಬರೆದಿದ್ದಾರೆ.

ಬೆಂಗಳೂರು ನಗರ ಸಂಚಾರಿ ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಇತ್ತೀಚೆಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ತೀವ್ರಗೊಂಡಿದೆ.

ಆದರೆ, ಹೀಗೆ ತೆರವುಗೊಳಿಸಿದ ಜಾಗಗಳನ್ನು ಕೆಲವು ಬೇಜವಾಬ್ದಾರಿ ಸವಾರರು ಟ್ರಾಫಿಕ್‌ನಿಂದ ತಪ್ಪಿಸಿಕೊಳ್ಳಲು ಶಾರ್ಟ್‌ಕಟ್ ರಸ್ತೆಯನ್ನಾಗಿ ಬಳಸುತ್ತಿರುವುದು ಆತಂಕ ಮೂಡಿಸಿದೆ. ಇದು ಪಾದಚಾರಿಗಳ ಜೀವಕ್ಕೆ ಅಪಾಯ ತಂದೊಡ್ಡುತ್ತಿರುವುದರಿಂದ, ಭಾರೀ ಮೊತ್ತದ ದಂಡ ವಿಧಿಸಿದರೆ ಮಾತ್ರ ಜನರಲ್ಲಿ ನಿಯಮ ಪಾಲನೆಯ ಗಂಭೀರತೆ ಬರಲಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಇದರೊಂದಿಗೆ, ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ಪ್ರಮುಖ ಜಂಕ್ಷನ್‌ಗಳಿಂದ 500 ಮೀಟರ್ ಹಾಗೂ ಸಿಗ್ನಲ್‌ಗಳಿಂದ 750 ಮೀಟರ್ ವ್ಯಾಪ್ತಿಯಲ್ಲಿರುವ ಬಸ್ ನಿಲ್ದಾಣಗಳನ್ನು ಹಂತ ಹಂತವಾಗಿ ಬೇರೆಡೆಗೆ ಸ್ಥಳಾಂತರಿಸಲು ಬಿಬಿಎಂಪಿ ಮತ್ತು ಬಿಎಂಟಿಸಿಗೆ ಸೂಚಿಸಲಾಗಿದೆ.

ಮುಖ್ಯ ರಸ್ತೆಗಳ ಇಕ್ಕೆಲಗಳಲ್ಲಿ ಅನಧಿಕೃತವಾಗಿ ವಾಹನಗಳನ್ನು ಪಾರ್ಕಿಂಗ್ ಮಾಡುವುದಕ್ಕೂ ಕಟ್ಟುನಿಟ್ಟಿನ ನಿಷೇಧ ಹೇರಲಾಗುತ್ತಿದೆ. ಈ ಎಲ್ಲಾ ನಿಯಮಗಳು ಸಂಪೂರ್ಣವಾಗಿ ಜಾರಿಗೆ ಬಂದರೆ ರಾಜಧಾನಿಯ ರಸ್ತೆಗಳಲ್ಲಿ ಪ್ರತಿದಿನ ವಾಹನ ಸಂಚಾರಕ್ಕೆ ಹೆಚ್ಚಿನ ಜಾಗ ಸಿಗಲಿದ್ದು, ಟ್ರಾಫಿಕ್ ಸಮಸ್ಯೆ ಗಣನೀಯವಾಗಿ ತಗ್ಗಲಿದೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Exit mobile version