ರಾಜ್ಯಾದ್ಯಂತ ವಾರವಿಡೀ ವರುಣನ ಆರ್ಭಟ! ಯಾವೆಲ್ಲಾ ಜಿಲ್ಲೆಗಳಲ್ಲಿ ಹೈ ಅಲರ್ಟ್? ಇಲ್ಲಿದೆ ಡಿಟೈಲ್ಸ್
ಮುಂದಿನ ಏಳು ದಿನಗಳ ಕಾಲ ರಾಜ್ಯದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ವರುಣ ದೇವ ತಂಪೆರೆಯಲು ಸಜ್ಜಾಗಿದ್ದಾನೆ. ಮುಂದಿನ ಏಳು ದಿನಗಳ ಕಾಲ ರಾಜ್ಯದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇವಲ ಮಳೆ ಮಾತ್ರವಲ್ಲದೆ, ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಕೊಡಗು ಮತ್ತು ಚಾಮರಾಜನಗರದಲ್ಲಿ ಮಳೆ ಆರ್ಭಟ ಜೋರಿರಲಿದೆ. ವಿಶೇಷವಾಗಿ ಮೇ 5 ಮತ್ತು 6 ರಂದು ಈ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಹವಾಮಾನ ಬಹುತೇಕ ಒಣದಾಗಿರಲಿದೆ. ಆದರೆ, ಅಲ್ಲಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ. ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಈ ಭಾಗಗಳಲ್ಲಿ ವರುಣನ ಅಬ್ಬರ ತುಸು ಕಡಿಮೆ ಇರಲಿದೆ.ಮಳೆ ಮತ್ತು ಗಾಳಿ ಜೋರಾಗಿರುವ ಸಮಯದಲ್ಲಿ ಮರಗಳ ಕೆಳಗೆ ಆಶ್ರಯ ಪಡೆಯಬೇಡಿ. ಸಿಡಿಲು ಬರುವ ಮುನ್ಸೂಚನೆ ಇದ್ದರೆ ತೆರೆದ ಪ್ರದೇಶದಲ್ಲಿ ಇರದೆ ಸುರಕ್ಷಿತ ಕಟ್ಟಡಗಳ ಒಳಗೆ ಇರಿ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ರೈತರು ತಮ್ಮ ಬೆಳೆ ಮತ್ತು ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.



