ಮಳೆಗೆ ನಲುಗಿದ ರಾಜಧಾನಿ: ಸಾವಿನ ಸಂಖ್ಯೆ 9ಕ್ಕೆ ಏರಿಕೆ – ಬೆಸ್ಕಾಂ ವಿರುದ್ಧ ಜನಾಕ್ರೋಶ!
ರಾಜಧಾನಿ ಬೆಂಗಳೂರಿನಲ್ಲಿ ಕೇವಲ ಅರ್ಧ ಗಂಟೆಗಳ ಕಾಲ ಸುರಿದ ಮಳೆಯು ಅಲ್ಲೋಲ ಕಲ್ಲೋಲವನ್ನೇ ಸೃಷ್ಠಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕೇವಲ ಅರ್ಧ ಗಂಟೆಗಳ ಕಾಲ ಸುರಿದ ಮಳೆಯು ಅಲ್ಲೋಲ ಕಲ್ಲೋಲವನ್ನೇ ಸೃಷ್ಠಿಸಿದೆ. ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಅಮಾಯಕ ಜೀವಗಳು ಬಲಿಯಾಗಿರುವ ಬೆನ್ನಲ್ಲೇ ಮತ್ತೆರಡು ಸಾವು ಪ್ರಕರಣಗಳು ವರದಿಯಾಗಿದೆ. ಜೆ.ಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಂದೆಡೆ ಯಾರಬ್ ನಗರದಲ್ಲಿ ಬೈಕ್ ಪಾರ್ಕ್ ಮಾಡುತ್ತಿದ್ದ ಸಂದರ್ಭದಲ್ಲಿ ಸೈಯದ್ ಸೂಫಿಯಾನ್ ಎಂಬ ಹೆಸರಿನ ಯುವಕ ವಿದ್ಯುತ್ ಶಾಕ್ಗೆ ಬಲಿಯಾಗಿದ್ದಾನೆ.
ಜೆ.ಪಿ ನಗರದಲ್ಲಿ ಮೃತಪಟ್ಟ ವ್ಯಕ್ತಿಯನ್ನು 35 ವರ್ಷ ಪ್ರಾಯದ ರಘು ಎಂದು ಗುರುತಿಸಲಾಗಿದೆ. ಮಳೆಯ ನಡುವೆ 15ನೇ ಕ್ರಾಸ್ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಕಂಬದ ಬಳಿ ಇದ್ದ ವೈರ್ ಸ್ಪರ್ಶವಾಗಿದೆ. ಏಕಾಏಕಿ ಶಾಕ್ ತಗುಲಿದ ಪರಿಣಾಮ ರಘು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ : https://kannada.newsnext.live/namma-bengaluru/heavy-rains-in-bengaluru-compound-wall-collapsed-7-dead/ಬೆಂಗಳೂರಿನಲ್ಲಿ ಮಳೆಯ ಅಟ್ಟಹಾಸ: ಕಾಂಪೌಂಡ್ ಗೋಡೆ ಕುಸಿತ – 7 ಮಂದಿ ದುರ್ಮರಣ
ಇತ್ತ ಬೌರಿಂಗ್ ಆಸ್ಪತ್ರೆಯಲ್ಲಿ ಗಾಯಗೊಂಡಿರುವ ರೋಗಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರದ ವತಿಯಿಂದ ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಹೇಳಿದೆ.
ಇತ್ತ ಪ್ರಧಾನಿ ನರೇಂದ್ರ ಮೋದಿ ಕೂಡ ಬೌರಿಂಗ್ ಆಸ್ಪತ್ರೆಯಲ್ಲಿ ಸಂಭವಿಸಿದ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.



