ಚೆನ್ನೈ: ಇತ್ತೀಚಿಗಷ್ಟೇ ಬಿಜೆಪಿ ಸೇರಿದ್ದ ಮಾಜಿ ಕರ್ನಾಟಕದ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಕೆ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿಯ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್.ಮುರುಗನ್ ಅವರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಇದೀಗ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಅವರನ್ನು ನೇಮಕ ಮಾಡಿದೆ. ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಕರ್ನಾಟಕದಲ್ಲಿ ದಕ್ಷ ಆಡಳಿತದ ಮೂಲಕ ಹೆಸರುಗಳಿಸಿದ್ದರು. ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಪೊಲೀಸ್ ಅಧಿಕಾರಿಯಾಗಿ ಸೇವೆಯನ್ನು ಸಲ್ಲಿಸಿದ್ದರು. ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ ಅವರು ಅಗಸ್ಟ್ 2020 ರಲ್ಲಿ ಬಿಜೆಪಿಗೆ ಸೇರಿದ್ದರು.

ಅಣ್ಣಾಮಲೈ ಬಿಜೆಪಿಗೆ ಸೇರುತ್ತಿದ್ದಂತೆಯೇ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷ ಸಂಘಟನೆಗೆ ಮುಂದಾಗಿದ್ದರು. ಅಲ್ಲದೇ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ರಾಷ್ಟ್ರೀಯ ಬಿಜೆಪಿ ನಾಯಕರ ಜೊತೆಗೆ ಉತ್ತಮ ಒಡನಾಟವನ್ನು ಹೊಂದಿರುವ ಅಣ್ಣಾಮಲೈ ಅಅವರು, ಇತ್ತೀಚೆಗೆ ನಡೆದ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಅರಾವಕುರುಚಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು.

ಇದೀಗ ಮುರುಗನ್ ಅವರನ್ನು ಕೇಂದ್ರ ಸಂಪುಟಕ್ಕೆ ಸೇರ್ಪಡೆಗೊಳಿಸಿದ ಬೆನ್ನಲ್ಲೇ ಅಣ್ಣಾಮಲೈ ಅವರಿಗೆ ಲಕ್ ಖುಲಾಯಿಸಿದೆ. 2024 ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ಸಂಘಟನೆಗಾಗಿ ರಾಷ್ಟ್ರೀಯ ಬಿಜೆಪಿ ನಾಯಕರು ಅಣ್ಣಾಮಲೈ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.