ನವದೆಹಲಿ : ಸಿಬಿಐ (ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ) ಮುಖ್ಯ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯನ್ನು ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಬಿಐ ಮುಖ್ಯ ಕಚೇರಿಯ ಎಸಿ ಪ್ಲ್ಯಾಂಟ್ ಕೋಣೆಯ ನೆಲ ಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಬಂದ ಆರು ಅಗ್ನಿಶಾಮಕ ತಂಡಗಳು ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಕಾರ್ಯಚರಣೆಯನ್ನು ನಡೆಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ತಿಳಿದುಬಂದಿದೆ.
ಸಿಬಿಐ ಕಟ್ಟಡದಲ್ಲಿನ ಜನರೇಟರ್‌ನಲ್ಲಿನ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಹೊಗೆ ಕಾಣಿಸಿಕೊಂಡು ನಂತರದಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ನಂದಿಸಲಾಗಿದ್ದು, ಕಚೇರಿಯ ಕಾರ್ಯ ಚಟುವಟಿಕೆಗಳು ಮತ್ತೆ ಆರಂಭಗೊಳ್ಳಲಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿರುವ ಕುರಿತು ರಾಷ್ಟ್ರೀಯ ವಾಹಿನಿಗಳು ವರದಿ ಮಾಡಿವೆ.