ದ.ಕ ಜಿಲ್ಲೆಯಲ್ಲಿಂದು 145 ಕೊರೊನಾ ಪಾಸಿಟಿವ್ ! ಕೊರೊನಾ ಹಾಟ್ ಸ್ಪಾಟ್ ಆಯ್ತಾ ಉಳ್ಳಾಲ ?

0

ಮಂಗಳೂರು : ಕರಾವಳಿಯ ಜಿಲ್ಲೆಗಳು ಕೊರೊನಾ ಹೆಮ್ಮಾರಿಯ ಆರ್ಭಟಕ್ಕೆ ತತ್ತರಿಸಿ ಹೋಗಿವೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತಲಾ ಸಾವಿರದ ಗಡಿದಾಟಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಬರೋಬ್ಬರಿ 145 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಿಂದಲೂ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ದಿನ ಕಳೆದಂತೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಜಿಲ್ಲೆಯಲ್ಲಿ ಒಟ್ಟು 1,087 ಮಂದಿ ಕೊರೊನಾ ಸೋಂಕಿತರಿದ್ದು, ಈ ಪೈಕಿ ಇದುವರೆಗೆ 513 ಮಂದಿ ಮಹಾಮಾರಿಯಿಂದ ಗುಣಮುಖರಾಗಿದ್ದಾರೆ. ಉಳಿದಂತೆ 552 ಮಂದಿ ಇಂದಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆಯೂ 22ಕ್ಕೆ ಏರಿಕೆಯಾಗಿದೆ. ಕಳೆದ ಮೂರು ದಿನಗಳಿಂದಲೂ ಶತಕದ ಗಡಿಯಂಚಲ್ಲಿ ಬಂದು ನಿಲ್ಲುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇಂದು ಶತಕದ ಗಡಿದಾಟಿದೆ. ಇಂದು ಜಿಲ್ಲೆಯಲ್ಲಿ 145 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎನ್ನಲಾಗುತ್ತಿದೆ.

ಕೊರೊನಾ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿರುವ ಉಳ್ಳಾಲದಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಪ್ರಕರಣ ದಾಖಲಾಗುತ್ತಿದೆ. ಕೇವಲ ಉಳ್ಳಾಲದಲ್ಲಿಯೇ 103 ಮಂದಿ ಇದುವರೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಆದ್ರಿಂದು ಮತ್ತೆ 40ಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪ್ರಮುಖವಾಗಿ ಕೊರೊನಾ ಸೋಂಕಿತರ ಜೊತೆಗೆ ಪ್ರಾಥಮಿಕ ಸಂಪರ್ಕದಲ್ಲಿರುವವರು ಹಾಗೂ ಅಂತರಾಷ್ಟ್ರೀಯ ಪ್ರಯಾಣ ಮಾಡಿದವರಿಗೆ ಸೋಂಕು ಕಾಣಿಸಿಕೊಂಡಿದೆ. ಈ ಕುರಿತು ಜಿಲ್ಲಾಡಳಿತ ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ. ಕೊರೊನಾ ಸೋಂಕು ಹೆಚ್ಚುತ್ತಿರುವುದು ಕರಾವಳಿಗರಿಗೆ ಆತಂಕವನ್ನು ತಂದೊಡ್ಡಿದೆ.

Leave A Reply

Your email address will not be published.