Civil hospital Fire : ಕೋವಿಡ್‌ ಆಸ್ಪತ್ರೆಯಲ್ಲಿ ಅಗ್ನಿದುರಂತ : 10 ಮಂದಿ ಸಾವು

ಅಹ್ಮದ್‌ನಗರ : ಕೋವಿಡ್‌ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿ, ಹತ್ತು ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಹ್ಮದ್‌ನಗರದ ಸಿವಿಲ್ ಆಸ್ಪತ್ರೆಯ ಐಸಿಯುನಲ್ಲಿ (ತೀವ್ರ ನಿಗಾ ಘಟಕ) ನಡೆದಿದೆ. ಆಸ್ಪತ್ರೆಯ ಐಸಿಯುನಲ್ಲಿ ಒಟ್ಟು 17 ರೋಗಿಗಳು ಚಿಕಿತ್ಸೆಯನ್ನು ಪಡೆಯುತ್ತಿದ್ದು, ಮತ್ತೋರ್ವ ರೋಗಿಯ ಸ್ಥಿತಿ ಗಂಭೀರವಾಗಿದೆ.

ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆಯಲ್ಲಿ ಐಸಿಯುನಲ್ಲಿ ಒಟ್ಟು 17 ಮಂದಿ ಚಿಕಿತ್ಸೆಯನ್ನು ಪಡೆಯುತ್ತಿದ್ದು, ಈ ಪೈಕಿ ಹತ್ತು ಮಂದಿ ಸಜೀವವಾಗಿ ದಹನವಾಗಿದ್ದಾರೆ. ಮತ್ತೋರ್ವನ ಸ್ಥಿತಿ ಚಿಂತಾಜನಕ ವಾಗಿದೆ. ಉಳಿದವರನ್ನು ಪಕ್ಕದ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ದುರಂತದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತನಿಖೆಗೆ ಆದೇಶಿಸಿದ್ದಾರೆ.

ಘಟನೆ ನಡೆಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಈ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಬೋಸ್ಲೆ ತಿಳಿಸಿದ್ದಾರೆ.

ಅಗ್ನಿ ದುರಂತದಿಂದಾಗಿ ಐಸಿಯು ವಾರ್ಡ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕೋವಿಡ್‌ ರೋಗಿಗಳಿಗೆ ಉತ್ತಮ ಚಿಕಿತ್ಸೆಯನ್ನು ನೀಡುವ ಸಲುವಾಗಿ ಐಸಿಯು ಅನ್ನು ಹೊಸದಾಗಿ ನಿರ್ಮಾಣ ಮಾಡಲಾಗಿತ್ತು. ಇದೀಗ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಬೆನ್ನಲ್ಲೇ ಎಲ್ಲಾ ಆಸ್ಪತ್ರೆಗಳಲ್ಲಿ ಫೈರ್‌ ಆಡಿಟ್‌ ಕೈಗೊಳ್ಳಲು ಸೂಚನೆಯನ್ನು ನೀಡಲಾಗಿದೆ. ಆಹ್ಮದ್‌ ನಗರ ಸಿವಿಲ್‌ ಆಸ್ಪತ್ರೆಯಲ್ಲಿ ನಡೆದಿರುವ ದುರಂತದ ಕುರಿತು ವರದಿಯನ್ನು ಪರಿಶೀಲಿಸಲಾಗುವುದು ಎಂದು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಹೇಳಿದ್ದಾರೆ.

ಇನ್ನು ದುರಂತದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌ ದುರಂತಕ್ಕೆ ಕಾರಣರಾದ ವ್ಯಕ್ತಿಗಳ ವಿರುದ್ದ ಕಠಿಣ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಘಟನೆ ತುಂಬಾ ಆಘಾತಕಾರಿಯಾಗಿದೆ. ಪ್ರೀತಿ ಪಾತ್ರರನ್ನು ಕಳೆದುಕೊಂಡಿರಿವ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ : ಚಿನ್ನ ಕಳ್ಳ ಸಾಗಾಣಿಕೆ ಆರೋಪಿ ಸ್ವಪ್ನಾ ಸುರೇಶ್‌ ಬಿಡುಗಡೆ : ಕೇರಳ ಸಿಎಂಗೆ ಉರುಳಾಗುತ್ತಾ ಪ್ರಕರಣ ?

ಇದನ್ನೂ ಓದಿ : ಪ್ರೀತಿಗೆ ತಂದೆಯೇ ವಿಲನ್‌ ! ಮಗಳನ್ನು ಕೊಲೆಗೈದು ಶವ ಎಸೆದ ಅಪ್ಪ

(10 patients dead as massive fire breaks out at civil hospital in Maharashtra’s Ahmednagar )

Comments are closed.