Corona Alert : ಕೇರಳದಲ್ಲಿ ಕೊರೊನಾ ಅಬ್ಬರ : ದ.ಕ., ಮೈಸೂರು ಸೇರಿ ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್‌ : ಸಿಎಂ ಬೊಮ್ಮಾಯಿ

ನವದೆಹಲಿ : ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕಿನ ಅಬ್ಬರ ಜೋರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣನೆ ಮಾಡಿದ್ದೇವೆ. ಈಗಾಗಲೇ ದಕ್ಷಿಣ ಕನ್ನಡ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಅಲ್ಲದೇ ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಇಂದು ರಾಜ್ಯದ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ನಾಳೆ ರಾಜ್ಯಕ್ಕೆ ಹಿಂದಿರುಗಿದ ಬಳಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸುತ್ತೇನೆ ಎಂದಿದ್ದಾರೆ.

ದಕ್ಷಿಣ ಕನ್ನಡ, ಮೈಸೂರು, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಪರೆನ್ಸ್‌ ನಡೆಸಿ ಕೊರೊನಾ ಪರಿಸ್ಥಿತಿ ಕುರಿತು ಮಾಹಿತಿಯನ್ನು ಕಲೆ ಹಾಕಲಿದ್ದೇನೆ. ಅಲ್ಲದೇ ಮುಂಜಾಗ್ರತಾ ಕ್ರಮಗಳ ಬಗ್ಗೆ ಕ್ರಮಕೈಗೊಳ್ಳುತ್ತೇನೆ ಎಂದಿದ್ದಾರೆ.

ಈಗಾಗಲೇ ಕೇರಳ ಗಡಿಭಾಗದಲ್ಲಿ ರಾಜ್ಯಕ್ಕೆ ಬರುವವರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಈಗ ರಸ್ತೆ ಮಾರ್ಗದ ಮೂಲಕ ಬರುವವರನ್ನು ಮಾತ್ರ ತಪಾಸಣೆಗೆ ಮಾಡಲಾಗುತ್ತಿದೆ. ರೈಲ್ವೆಯಲ್ಲಿ ರಾಜ್ಯಕ್ಕೆ ಬರುವವರನ್ನು ತಪಾಸಣೆ ನಡೆಸುವ ಬಗ್ಗೆ ಸೂಚನೆಯನ್ನು ನೀಡಿದ್ದೇನೆ. ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳವಾದ್ರೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳೇ ಜವಾಬ್ದಾರರು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.

Comments are closed.