ಬೆಂಗಳೂರು : ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಸ್ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಸಿಡಿಲೇಡಿ ದೂರಿನ ಹಿನ್ನೆಲೆಯಲ್ಲಿ ಜಾರಕಿಹೊಳಿ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆಯೂ ಇದೆ.

ಸಂತ್ರಸ್ತ ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರು ಎಫ್ ಐಆರ್ ದಾಖಲು ಮಾಡಿ ನಾಲ್ಕು ದಿನಗಳು ಕಳೆದ ನಂತರದಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದಾರೆ. ಇಂದು ರಮೇಶ್ ಜಾರಕಿಹೊಳಿ ತನ್ನ ವಕೀಲರಾದ ಶ್ಯಾಮ್ ಸುಂದರ್ ಅವರ ಜೊತೆಗೆ ಆಡುಗೋಡಿಯ ಟೆಕ್ನಿಕಲ್ ಸೆಲ್ ನಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಯ ವೇಳೆಯಲ್ಲಿ ರಮೇಶ್ ಜಾರಕಿಹೊಳಿ ಅವರ ಮೊಬೈಲ್ ನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಯುವತಿ ಇಂದು ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡುವ ಸಾಧ್ಯತೆಯಿದೆ. ಇದೇ ಹಿನ್ನೆಲೆಯಲ್ಲಿಯೇ ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಯುವತಿಯ ದೂರನ್ನು ಆಧರಿಸಿ ಎಸ್ ಐಟಿ ಅಧಿಕಾರಿಗಳು ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸುವ ಸಾಧ್ಯತೆಯಿದೆ.