mangaluruBreakingTop story

ಮಂಗಳೂರು : ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ : ಆಗಸ್ಟ್‌ 1ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಅಗಸ್ಟ್‌ 1 ರಂದು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

By Arun Gundmi | ಅರುಣ್‌ ಗುಂಡ್ಮಿ · Editor-in-Chief

2 min read

WhatsAppPost
Dakshina Kannada Heavy Rain fall School Holiday August 1
Dakshina Kannada Heavy Rain fall School Holiday August 1

ಮಂಗಳೂರು : ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ : ಆಗಸ್ಟ್‌ 1ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಅಗಸ್ಟ್‌ 1 ರಂದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಕುರಿತು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್‌ ಎಚ್‌.ವಿ. ಆದೇಶ ಹೊರಡಿಸಿದ್ದಾರೆ.

ಅಗಸ್ಟ್‌ 1 ರಂದು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ವಸತಿ ಶಾಲೆ, ವಸತಿ ಪದವಿ ಪೂರ್ವ ಕಾಲೇಜು ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಆದೇಶಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಯಾವೆಲ್ಲಾ ಭಾಗದಲ್ಲಿ ಮಳೆ ?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಧಾರಾಕಾರ ಮಳೆ ಸುರಿದಿದ್ದು, ಗ್ರಾಮೀಣ ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕು ವ್ಯಾಪ್ತಿಗಳಲ್ಲಿ ಭಾರಿ ಮಳೆಯಾಗಿದೆ. ಅಲ್ಲದೇ ಧರ್ಮಸ್ಥಳ, ಚಾರ್ಮಾಡಿ ಘಾಟಿ ಸೇರಿದಂತೆ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಮಳೆಯ ಆರ್ಭಟ ಜೋರಾಗಿತ್ತು.

ಇನ್ನು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಧಾಖಲೆಯ ಮಳೆ ಸುರಿದಿದೆ. ಮಂಗಳೂರು ನಗರ, ಕೊಣಾಜೆ, ಮೂಲ್ಕಿ, ಪಣಂಬೂರು ಹಾಗೂ ಉಳ್ಳಾಲ ಭಾಗದಲ್ಲೂ ಭಾರಿ ಗಾಳಿ ಸಹಿತ ಉತ್ತಮ ಮಳೆಯಾಗಿದೆ.

ನಾಳೆ (ಆಗಸ್ಟ್ 1) ಮಳೆಯ ಪರಿಸ್ಥಿತಿ ಹೇಗಿರಲಿದೆ ?

ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ನೀಡಿರುವ ಮುನ್ಸೂಚನೆಯ ಪ್ರಕಾರ ನಾಳೆಯೂ ಕೂಡ ಧಾರಾಕಾರ ಮಳೆ ಮುಂದುವರಿಯಲಿದೆ.

ವಾಯುಭಾರ ಕುಸಿತದ ಪ್ರಭಾವ: ಗುಜರಾತ್‌ ಕಡೆಗೆ ತಲುಪಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಕಡಲ ತೀರದಲ್ಲಿ ಎಚ್ಚರಿಕೆ: ಅರಬ್ಬಿ ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಕರಾವಳಿ ತೀರದ ಜನರು ಜಾಗರೂಕರಾಗಿರಲು ಜಿಲ್ಲಾಡಳಿತ ಸೂಚಿಸಿದೆ.

ಜಿಲ್ಲಾಧಿಕಾರಿಗಳ ನಿರ್ಬಂಧವೇನು ? ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಹಾಗೆಯೇ, ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ, ಕೆರೆ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ.

ಶಾಲಾ-ಕಾಲೇಜು ರಜೆ: ಯಾರಿಗೆಲ್ಲಾ ಅನ್ವಯ?

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಆದೇಶದಂತೆ ಆಗಸ್ಟ್ 1 ರಂದು ಈ ಕೆಳಗಿನ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ: ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು. ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು (ವಸತಿ ಶಾಲೆಗಳೂ ಸೇರಿದಂತೆ). ಎಲ್ಲಾ ಪದವಿ ಪೂರ್ವ ಕಾಲೇಜುಗಳು / 12ನೇ ತರಗತಿವರೆಗೆ (ವಸತಿ ಕಾಲೇಜುಗಳು ಸೇರಿದಂತೆ). ಎಲ್ಲಾ ಐಟಿಐ (ITI) ಮತ್ತು ಡಿಪ್ಲೊಮಾ (Diploma) ಕಾಲೇಜುಗಳು.

ರಜೆ ಉಲ್ಲಂಘಿಸಿದ್ರೆ ಕಠಿಣ ಕ್ರಮದ ಎಚ್ಚರಿಕೆ

ಜಿಲ್ಲಾಡಳಿತ ನೀಡಿರುವ ರಜೆಯ ಆದೇಶವನ್ನು ಎಲ್ಲಾ ಶಾಲೆ, ಕಾಲೇಜುಗಳು ಕಡ್ಡಾಯವಾಗಿ ಪಾಲಿಸಲೇ ಬೇಕು. ಒಂದೊಮ್ಮೆ ರಜೆಯ ಆದೇಶವನ್ನು ಧಿಕ್ಕರಿಸಿದ್ರೆ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ದ 'ವಿಪತ್ತು ನಿರ್ವಹಣಾ ಕಾಯ್ದೆ 2005'ರ ನಿಯಮಾನುಸಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಇನ್ನು ತುರ್ತು ಸಹಾಯವಾಣಿ ಮಳೆ ಅಥವಾ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ಜಿಲ್ಲಾಡಳಿತದ ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು: ಟೋಲ್ ಫ್ರೀ ಸಂಖ್ಯೆ: 1077 ದೂರವಾಣಿ ಸಂಖ್ಯೆ: 0824-2442590

Topics