ಕರ್ನಾಟಕದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅಕ್ಟೋಬರ್ 18ರಿಂದ ಅಕ್ಟೋಬರ್ 23ರವರೆಗೆ ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕರಾವಳಿ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ರಾಜ್ಯದ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ.
ಕರಾವಳಿ ಭಾಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಹಾಗೂ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಈ ನಡುವೆ ಬೆಂಗಳೂರಿನಲ್ಲಿ ಈಗಾಗಲೇ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಹಲವು ಭಾಗಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಮತ್ತು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದ್ದಾರೆ.
ಚಾಮರಾಜಪೇಟೆಯಲ್ಲಿ ಮಳೆ ನೀರು ಹಲವು ಅಂಗಡಿಗಳಿಗೆ ನುಗ್ಗಿದ್ದು, ವ್ಯಾಪಾರಿಗಳಿಗೆ ಭಾರಿ ನಷ್ಟ ಉಂಟಾಗಿದೆ. ಪ್ರಮುಖ ಅಂಡರ್ಪಾಸ್ಗಳಲ್ಲಿ ನೀರು ತುಂಬಿಕೊಂಡ ಪರಿಣಾಮ ಸಂಚಾರ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದೆ. ವಾಹನ ಸವಾರರು ಹಾಗೂ ದಿನನಿತ್ಯದ ಪ್ರಯಾಣಿಕರು ಪರದಾಡುವಂತಾಗಿದೆ.
ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವ ಮುನ್ಸೂಚನೆ ಇರುವುದರಿಂದ, ಮುನ್ನೆಚ್ಚರಿಕಾ ಕ್ರಮಗಳನ್ನು ಹೆಚ್ಚಿಸಿರುವ ಅಧಿಕಾರಿಗಳು ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ.
ಅಕ್ಟೋಬರ್ 22ರವರೆಗೆ ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ:
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಅಕ್ಟೋಬರ್ 20ರಿಂದ ಅಕ್ಟೋಬರ್ 22ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಯೆಲ್ಲೋ ಅಲರ್ಟ್ ನೀಡಲಾಗಿರುವ ಪ್ರದೇಶಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ. ಸಾರ್ವಜನಿಕರು ಹವಾಮಾನ ಪರಿಸ್ಥಿತಿಯನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.