Kannada News Next

karnataka

ಕರಾವಳಿಯಲ್ಲಿ ಮತ್ತೆ ಮುಂಗಾರು ಆ್ಯಕ್ಟಿವ್​: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಭಾವ ಹೆಚ್ಚಾಗಿದ್ದು, ಪ್ರಮುಖವಾಗಿ ಮೂರು ಜಿಲ್ಲೆಗಳಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹೈ ಆಲರ್ಟ್ ಘೋಷಿಸಲಾಗಿದೆ.

By ರಶ್ಮಿ ಎಸ್. | Rashmi S
Karnataka coastal malnad heavy rain alert imd

ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ನೈಋತ್ಯ ಮುಂಗಾರು ಮಳೆಯು ಬಿರುಸಿನಿಂದ ಕೂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯಾದ್ಯಂತ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಭಾವ ಹೆಚ್ಚಾಗಿದ್ದು, ಪ್ರಮುಖವಾಗಿ ಮೂರು ಜಿಲ್ಲೆಗಳಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹೈ ಆಲರ್ಟ್ ಘೋಷಿಸಲಾಗಿದೆ.

ಹವಾಮಾನ ಕೇಂದ್ರದ ಅಧಿಕೃತ ವರದಿಯ ಪ್ರಕಾರ, ದಕ್ಷಿಣ ಒಳನಾಡಿನ ಮಲೆನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನದಲ್ಲಿ ಕೆಲವು ಕಡೆಗಳಲ್ಲಿ ಗುಡುಗು ಮತ್ತು ಮಿಂಚಿನ ಆರ್ಭಟದೊಂದಿಗೆ ಮುಸಲಧಾರೆ ಮಳೆಯಾಗುವ ಮುನ್ಸೂಚನೆ ಇದೆ.

ಇನ್ನು ಕರಾವಳಿ ತೀರದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗಲಿದೆ. ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೋಲಾರ, ಕೊಡಗು ಮತ್ತು ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಇತರೆ ಭಾಗಗಳಲ್ಲಿ ಸಾಧಾರಣವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ.

ಇದಕ್ಕೆ ವ್ಯತಿರಿಕ್ತವಾಗಿ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮುಂಗಾರು ದುರ್ಬಲಗೊಂಡಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಗದಗ ಹಾಗೂ ಹಾವೇರಿಯಲ್ಲಿ ಮಾತ್ರ ಅಲ್ಪ ಮಳೆಯಾಗುವ ನಿರೀಕ್ಷೆ ಇದೆ.

ಕಳೆದ 24 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಶಕ್ತಿನಗರಲ್ಲಿ ಗರಿಷ್ಠ 11 ಸೆಂಟಿಮೀಟರ್, ಬೆಳ್ತಂಗಡಿಯಲ್ಲಿ 8 ಸೆಂಟಿಮೀಟರ್ ಹಾಗೂ ಶೃಂಗೇರಿಯಲ್ಲಿ 7 ಸೆಂಟಿಮೀಟರ್‌ ನಷ್ಟು ದಾಖಲೆಯ ಮಳೆ ದಾಖಲಾಗಿದೆ. ಅಕ್ಟೋಬರ್ 7 ರಂದು ಕೂಡ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.