Kannada News Next

karnataka

ನವರಾತ್ರಿಯ ಹೊತ್ತಲ್ಲೂ ನಿಲ್ಲದ ಮಳೆಯ ಆರ್ಭಟ: ಅಕ್ಟೋಬರ್‌ 24ರವರೆಗೆ ಸುರಿಯಲಿದೆ ಬಾರೀ ಮಳೆ

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದಲೂ ರಾತ್ರಿಯ ಹೊತ್ತಲ್ಲೇ ಧಾರಾಕಾರ ಮಳೆ ಸುರಿಯುತ್ತಿದೆ.

By ರಶ್ಮಿ ಎಸ್. | Rashmi S
Karnataka heavy rain alert October 24 Navratri weather update

ಕರ್ನಾಟಕದಲ್ಲಿ ಹಿಂಗಾರು ಮಳೆಯ ಆರ್ಭಟ ಜೋರಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರು, ಕರ್ನಾಟಕದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಗುಡುಗು ಸಹಿತ ಬಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ ಅಕ್ಟೋಬರ್‌ 24ರವರೆಗೂ ಬಾರೀ ಮಳೆ ಮುಂದುವರಿಯಲಿದೆ. ಹೀಗಾಗಿ ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದಲೂ ರಾತ್ರಿಯ ಹೊತ್ತಲ್ಲೇ ಧಾರಾಕಾರ ಮಳೆ ಸುರಿಯುತ್ತಿದೆ. ಅಕ್ಟೋಬರ್‌ 24ರವರೆಗೂ ಕೂಡ ಬೆಂಗಳೂರಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯ ಆರ್ಭಟ ಜೋರಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ 10 ಸೆಂಟಿ ಮೀಟರ್‌ ಮಳೆಯಾಗಿರುವ ಕುರಿತು ವರದಿಯಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಗಾಳಿಯ ಜೊತೆಗೆ ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ. ಅಕ್ಟೋಬರ್‌ 19ರಂದು ಮಳೆ ಸ್ವಲ್ಪ ಪ್ರಮಾಣದಲ್ಲಿ ತಗ್ಗಲಿದ್ದು, ಅಕ್ಟೋಬರ 20ರ ನಂತರ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

ಮಲೆನಾಡಿನ ಶಿವಮೊಗ್ಗ, ಮಡಿಕೇರಿ, ಹಾಸನ ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಧಾರವಾಡ, ಹಾವೇರಿ, ಬೆಳಗಾವಿ, ಬೀದರ್‌, ಕೊಪ್ಪಳ, ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಮುಂದಾದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಇರಲಿದ್ದು, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ, ರಾಮನಗರ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿಯೂ ಮಳೆಯ ಆರ್ಭಟ ಮುಂದುವರಿಯಲಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಅಕ್ಟೋಬರ್‌ 22ರವರೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಿದೆ.