ಕಳೆದ ಕೆಲವು ದಿನಗಳಿಂದಲೂ ಮಳೆಯ ಕೊರತೆಯನ್ನು ಅನುಭವಿಸಿದ್ದ ಕರ್ನಾಟಕದಲ್ಲಿ ಇಂದಿನಿಂದ ಮತ್ತೆ ಬಾರೀ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ 13ಕ್ಕೂ ಅಧಿಕ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದ್ದು, ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಕೆಲವು ದಿನಗಳ ವರೆಗೆ ಕರ್ನಾಟಕ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಿಲಿಕಾನ್ ಸಿಟಿ ಬೆಂಗಳೂರು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ಜೊತೆಗೆ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗಂಟೆ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಬಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು, ಬೆಂಗಳೂರು ಗ್ರಾಮಂತರ, ವಿಜಯಪುರ, ಕೊಪ್ಪಳ, ಬೀದರ್, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಶಿವಮೊಗ್ಗ, ಕೋಲಾರ ಜಿಲ್ಲೆಗಳಲ್ಲಿ ಬಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದಲ್ಲಿ ಈ ಬಾರಿ ಆರಂಭದಿಂದಲೂ ಮುಂಗಾರು ಮಳೆಯ ಕೊರತೆ ಉಂಟಾಗಿದ್ದು ಈಗಾಗಲೇ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹದ ಮಟ್ಟದಲ್ಲಿ ಬಾರೀ ಕುಸಿತ ಉಂಟಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎರಡು ದಿನಗಳ ಹಿಂದೆಯಷ್ಟೇ ಮಳೆ ಸುರಿದಿತ್ತು. ಇದೀಗ ರಾಜ್ಯದ 13 ಜಿಲ್ಲೆಗಳಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದ್ರೆ ಜಲಾಶಯಗಳು ಭರ್ತಿಯಾಗುವ ಸಾಧ್ಯತೆಯಿದೆ.