Kannada News Next

karnataka

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಮೋಡಕವಿದ ವಾತಾವರಣ : ಮುಂದಿನ 48 ಗಂಟೆ ಹಲವು ಜಿಲ್ಲೆಗಳಲ್ಲಿ ಗಾಳಿ-ಮಳೆ ಆರ್ಭಟ

ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 4 ಮತ್ತು 5 ರಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

By ರಶ್ಮಿ ಎಸ್. | Rashmi S
karnataka-weather-forecast-september-4-and-5-rain-alert

ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 4 ಮತ್ತು 5 ರಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯ ರಾಜ್ಯದಲ್ಲಿ ಮುಂಗಾರು ಮಳೆಯು ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ತುಸು ಕ್ಷೀಣಿಸಿದ್ದು, ಉತ್ತರ ಒಳನಾಡಿನಲ್ಲಿ ಸಾಮಾನ್ಯ ಸ್ಥಿತಿಯಲ್ಲಿದೆ.

ಹವಾಮಾನ ವರದಿಯ ಪ್ರಕಾರ, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಗದಗ, ರಾಯಚೂರು, ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆಯಲ್ಲಿ ಮಳೆಯೊಂದಿಗೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ನಿರಂತರ ಗಾಳಿ ಬೀಸುವ ಸಂಭವವಿದೆ. ಬೀದರ್, ಕಲಬುರಗಿ, ಹಾವೇರಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಹಗುರ ಮಳೆಯಾಗುವ ನಿರೀಕ್ಷೆಯಿದೆ.

ಮತ್ತೊಂದೆಡೆ, ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಶಿವಮೊಗ್ಗ, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಈ ಭಾಗಗಳಲ್ಲಿಯೂ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಕೇಂದ್ರ ಎಚ್ಚರಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಗರಿಷ್ಠ 3 ಸೆಂ.ಮೀ ಮಳೆ ದಾಖಲಾಗಿದ್ದರೆ, ಗೋಕರ್ಣ ಮತ್ತು ಗದಗಿನಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಒಟ್ಟಾರೆಯಾಗಿ ಮುಂದಿನ 48 ಗಂಟೆಗಳ ಕಾಲ ರಾಜ್ಯದ ಹಲವೆಡೆ ಗಾಳಿ ಮಳೆಯ ವಾತಾವರಣ ಮುಂದುವರಿಯಲಿದೆ.