ಬೆಂಗಳೂರು : ಭಾರತೀಯ ಹವಾಮಾನ ಇಲಾಖೆಯು ರಾಜ್ಯದ ಹವಾಮಾನಕ್ಕೆ ಸಂಬಂಧಿಸಿದಂತೆ ಮಹತ್ವದ ಮುನ್ಸೂಚನೆಯನ್ನು ಪ್ರಕಟಿಸಿದೆ. ಕೇರಳ ಕರಾವಳಿ ತೀರದಲ್ಲಿ ಸೃಷ್ಟಿಯಾಗಿರುವ ಮೇಲ್ಮೈ ಸುಳಿಗಾಳಿಯ ತೀವ್ರ ಪ್ರಭಾವದಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ ವಾತಾವರಣ ಸಂಪೂರ್ಣವಾಗಿ ಬದಲಾಗಿದ್ದು, ವ್ಯಾಪಕ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ.
ಹವಾಮಾನ ಇಲಾಖೆಯ ವರದಿಯ ಅನ್ವಯ, ರಾಜ್ಯದ ಪ್ರಮುಖ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಅಂದಾಜಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇವುಗಳ ಜೊತೆಗೆ ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ ಮತ್ತು ರಾಮನಗರ ಸೇರಿದಂತೆ ಒಟ್ಟು ಹದಿಮೂರು ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆಗಳು ಚುರುಕುಗೊಳ್ಳಲಿವೆ.
ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದೆ. ಇಂದು ಅಥವಾ ರಾತ್ರಿ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಕರಾವಳಿ ತೀರದ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರ ಮಳೆಯನ್ನು ನಿರೀಕ್ಷಿಸಲಾಗುತ್ತಿದೆ.
ಆದರೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದೆ ವಾತಾವರಣ ಎಂದಿನಂತೆ ಇರಲಿದೆ. ಮತ್ತೊಂದೆಡೆ, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತೀರಾ ಕ್ಷೀಣಿಸಲಿದ್ದು, ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.
ಸಾರ್ವಜನಿಕರು ಹಾಗೂ ರೈತರು ಗುಡುಗು ಸಿಡಿಲಿನ ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹಾಗೂ ಹವಾಮಾನದ ಬದಲಾವಣೆಗಳಿಗೆ ತಕ್ಕಂತೆ ಎಚ್ಚರಿಕೆ ವಹಿಸುವಂತೆ ಇಲಾಖೆಯು ಸೂಚಿಸಿದೆ.