News Next Kannada

karnataka

ಮಳೆ..ಮಳೆ..ಮಳೆ..ಕರಾವಳಿ, ಮಲೆನಾಡಲ್ಲಿಂದು ಬಾರೀ ಮಳೆ : ಬೆಂಗಳೂರು ಫುಲ್​ ಕೂಲ್​ ಕೂಲ್​

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಕರಾವಳಿ ತೀರದಲ್ಲಿ ಬಿರುಗಾಳಿ ಸಹಿತ ಮಳೆಯ ಆರ್ಭಟ ಜೋರಿರಲಿದೆ ಎಂದು ಐಎಂಡಿ ತಿಳಿಸಿದೆ.

By ರಶ್ಮಿ ಎಸ್. | Rashmi S
rain Udupi Mangaluru Chikkamgaluru Shivamogga Hassan heavy rain bengaluru cool weather

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗಿದ್ದು, ಇಂದು ಕೂಡ ರಾಜ್ಯಾದ್ಯಂತ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬೆಳಗ್ಗೆಯಿಂದಲೇ ಜಿಟಿಜಿಟಿ ಮಳೆ ಆರಂಭಗೊಂಡಿದ್ದು, ಇಂದು ಇಡೀ ದಿನ ಈ ಭಾಗದ ಜನತೆ ಮಳೆಯ ತಾಪತ್ರಯ ಎದುರಿಸಬೇಕಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಕರಾವಳಿ ತೀರದಲ್ಲಿ ಬಿರುಗಾಳಿ ಸಹಿತ ಮಳೆಯ ಆರ್ಭಟ ಜೋರಿರಲಿದೆ ಎಂದು ಐಎಂಡಿ ತಿಳಿಸಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಗಂಟೆಗೆ 3೦ ರಿಂದ 4೦ ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಇತ್ತ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಹಲವೆಡೆ ಸಾಧಾರಣದಿಂದ ಭಾರಿ ಮಳೆಯಾಗಲಿದ್ದು, ತಗ್ಗು ಪ್ರದೇಶಗಳಲ್ಲಿ ಹದ್ದಿನ ಕಣ್ಣು ಇಡಲಾಗಿದೆ.

ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. ನಗರದ ಕೆಲವು ಭಾಗಗಳಲ್ಲಿ ಸಾಧಾರಣ ಜಿಟಿಜಿಟಿ ಮಳೆಯಾಗುವ ನಿರೀಕ್ಷೆಯಿದೆ. ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ತಾಪಮಾನ 26 ರಿಂದ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ರಿಂದ 22 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗಲಿದ್ದು, ಮುಂಜಾನೆ ಹಾಗೂ ಸಂಜೆ ತಂಪಾದ ಹಿತಕರ ಗಾಳಿ ಬೀಸಲಿದೆ.

ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಭಾಗಗಳಲ್ಲಿ ತಂಪು ಹವಾಮಾನ ಮುಂದುವರಿಯಲಿದೆ. ಸಾರ್ವಜನಿಕರು ಪ್ರಯಾಣಿಸುವಾಗ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.