ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಆಗುಂಬೆ ಘಾಟ್ ರಸ್ತೆ ಅಭಿವೃದ್ದಿ ಕಾಣಲಿದೆ. ಇದಕ್ಕಾಗಿ ಕೇಂದ್ರ ಸರಕಾರ ಬರೋಬ್ಬರಿ 18 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಕಾರ್ಕಳ ಶಾಸಕರಾದ ವಿ.ಸುನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.
ಆಗುಂಬೆ ಘಾಟ್‌ನಿಂದ ಹೆಬ್ರಿ ಪೇಟೆಯ ವರೆಗೆ ಕೆಲವು ಭಾಗಗಳಲ್ಲಿ ರಸ್ತೆ ಕಾಮಗಾರಿಯನ್ನು ನಡೆಸಲಾಗುತ್ತಿದ್ದು, ವಾಹನಗಳ ಸುಗಮ ಸಂಚಾರದ ಜೊತೆಗೆ ಸುರಕ್ಷಿತ ಸಂಚಾರಕ್ಕೆ ಅನುಕೂಲಕ ಕಲ್ಪಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಘಾಟ್ ರಸ್ತೆಯ ಪ್ರಮುಖ ತಿರುವುಗಳಲ್ಲಿ ಅಗತ್ಯ ಕಾಮಗಾರಿಯ ಜೊತೆಗೆ ಕಾಂಕ್ರೀಟ್ ತಡೆಗೋಡೆಗಳನ್ನು ನಿರ್ಮಿಸಲು ಈ ಅನುದಾನವನ್ನು ಬಳಸಿಕೊಳ್ಳಲಾಗುತ್ತದೆ.
ಆಗುಂಬೆ ಘಾಟ್ ರಸ್ತೆಯಲ್ಲಿರುವ ಅಪಾಯಕಾರಿ ತಿರುವು ಹಾಗೂ ಘಾಟ್ ರಸ್ತೆಯ ಅಭಿವೃದ್ದಿಗಾಘಿ ಕಾರ್ಕಳ ಶಾಸಕರಾದ ವಿ.ಸುನಿಲ್ ಕುಮಾರ್ ಅವರು ಈ ಹಿಂದೆಯೇ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಶಾಸಕರ ಮನವಿಗೆ ಸ್ಪಂದಿಸಿದ ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಇದೀಗ 18 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಅಲ್ಲದೇ ಶಿವಮೊಗ್ಗ- ನರಸಿಂಹರಾಜಪುರ- ಕೊಪ್ಪ ಮಾರ್ಗವಾಗಿ ಶೃಂಗೇರಿ ರೇಲ್ವೆ ಮಾರ್ಗ ಹಾಗೂ ಆಗುಂಬೆ ಸುರಂಗ ಮಾರ್ಗಕ್ಕೆ ಅನುದಾನ ಬಿಡುಗಡೆಗೆ ವಿಶೇಷ ಮುತುವರ್ಜಿ ವಹಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ವಿಶೇಷ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.