Heavy Rain IMD Alert : ಕರಾವಳಿ - ಮಲೆನಾಡಿಗೆ ವರುಣನ ಕಂಟಕ : ಉಡುಪಿ, ದಕ್ಷಿಣ ಕನ್ನಡದಲ್ಲಿಂದು ಬಾರೀ ಮಳೆ

ಅಗಸ್ಟ್‌ 4 ರಂದು ಬಾರೀ ಮಳೆ ಸುರಿಯುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತಗಳು ರಜೆ ಘೋಷಣೆ ಮಾಡಿದೆ

By ರಶ್ಮಿ ಎಸ್. | Rashmi S

1 min read

WhatsAppPost
Karnataka Heavy Rain School Holiday
Karnataka Heavy Rain School Holiday

ಮಂಗಳೂರು / ಉಡುಪಿ : ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ನೈರುತ್ಯ ಮುಂಗಾರು ಮಳೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಾರ್ವಜನಿಕ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಪ್ರಕೃತಿಯ ಈ ಮುನಿಸನ್ನು ಗಮನದಲ್ಲಿಟ್ಟುಕೊಂಡು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಉಳ್ಳಾಲ, ಮೂಡುಬಿದಿರೆ, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಕಡಬ ಮತ್ತು ಸುಳ್ಯ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಅಂಗನವಾಡಿಯಿಂದ ಹಿಡಿದು ಪಿಯುಸಿವರೆಗಿನ ಎಲ್ಲಾ ವಿದ್ಯಾಸಂಸ್ಥೆಗಳಿಗೆ ರಜೆ ನೀಡಲು ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಇದೇ ರೀತಿ, ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕವಾಗಿ ವರ್ಷಧಾರೆ ಮುಂದುವರಿದಿರುವುದರಿಂದ ಅಲ್ಲಿನ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರೂ ಸಹ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಪ್ರಕಟಿಸಿದ್ದಾರೆ.

ಜೊಯಿಡಾದಲ್ಲಿ ದಾಖಲೆಯ ಮಳೆ

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದಲ್ಲಿ ಅತ್ಯಂತ ಗರಿಷ್ಠ ಪ್ರಮಾಣದ ಅಂದರೆ 15 ಸೆಂಟಿಮೀಟರ್ ಮಳೆ ದಾಖಲಾಗಿದೆ. ಇನ್ನುಳಿದಂತೆ ಸುಬ್ರಹ್ಮಣ್ಯದಲ್ಲಿ 12, ಲೋಂಡಾದಲ್ಲಿ 11 ಹಾಗೂ ಬೆಳ್ತಂಗಡಿಯಲ್ಲಿ 10 ಸೆಂಟಿಮೀಟರ್‌ನಷ್ಟು ಭಾರಿ ಮಳೆಯಾಗಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.

ಇದರೊಂದಿಗೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನ ಭಾಗಮಂಡಲ, ಕೊಲ್ಲೂರು ಹಾಗೂ ಆಗುಂಬೆಯಲ್ಲೂ ನಿರಂತರವಾಗಿ ವರುಣನ ಆರ್ಭಟ ಮುಂದುವರಿದಿದೆ. ಮುಂದಿನ ಎರಡು ದಿನಗಳ ಕಾಲ ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30 ರಿಂದ 50 ಕಿಲೋಮೀಟರ್ ತಲುಪುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಅದೇ ರೀತಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ ಮತ್ತು ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಸಾರ್ವಜನಿಕರು ನದಿ ಮತ್ತು ಸಮುದ್ರ ತೀರಗಳ ಬಳಿ ಹೋಗದಂತೆ ಹಾಗೂ ಸುರಕ್ಷಿತವಾಗಿರುವಂತೆ ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಸೂಚನೆ ನೀಡಿವೆ.

ಅಗಸ್ಟ್‌ 4ರಂದು ಸುರಿಯಲಿದೆ ರಣಭೀಕರ ಮಳೆ

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ಮಳೆ ಮುಂದುವರಿಯಲಿದೆ. ಇಂದು ಮುಂಜಾನೆಯಿಂದಲೇ ಬಾರೀ ಮಳೆ ಸುರಿಯುತ್ತಿದ್ದು, ಮಳೆಯ ಜೊತೆಗೆ ಗಾಳಿಯ ಆರ್ಭಟ ಕೂಡ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮಳೆಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿ ಇರುವ ಕಾರಣದಿಂದಾಗಿ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತಗಳು ಸೂಚನೆಯನ್ನು ನೀಡಿವೆ.

Topics

ಸಂಬಂಧಿತ ಸುದ್ದಿಗಳು