ಬೈಂದೂರು: ಲಾರಿ ತೆರವು ವೇಳೆ ಮತ್ತೊಂದು ಲಾರಿ ಹೈವೇ ಪೆಟ್ರೋಲ್‌ಗೆ ಡಿಕ್ಕಿ: ಬೈಕ್ ಸವಾರ ಸಾವು

ಅಪಘಾತಕ್ಕೀಡಾಗಿದ್ದ ಲಾರಿಯನ್ನು ಮೇಲೆತ್ತುವ ಕಾರ್ಯ ನಡೆಯುತ್ತಿದ್ದ ವೇಳೆ, ಮತ್ತೊಂದು ಲಾರಿ ನಿಯಂತ್ರಣ ತಪ್ಪಿ ಹೈವೆ ಪೆಟ್ರೋಲ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾನೆ.

By Meghana Pranuth | ಮೇಘನಾ ಪ್ರಣೂತ್‌

1 min read

WhatsAppPost
Byndoor accident
Byndoor accident

ಉಡುಪಿ: ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದ ಸರಕು ಲಾರಿಯನ್ನು ಮೇಲೆತ್ತುವ ಕಾರ್ಯ ನಡೆಯುತ್ತಿದ್ದ ವೇಳೆ, ಮತ್ತೊಂದು ಲಾರಿ ನಿಯಂತ್ರಣ ತಪ್ಪಿ ಹೈವೆ ಪೆಟ್ರೋಲ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೈಂದೂರು ಸಮೀಪ ಸಂಭವಿಸಿದೆ.

ಶಿರೂರು ನಿವಾಸಿ ನಾಗೇಂದ್ರ ಮಹಾಲೆ (45) ಮೃತ ದುರ್ದೈವಿ. ಈ ಭೀಕರ ಅಪಘಾತದಲ್ಲಿ ರಸ್ತೆ ಬದಿ ನಿಲ್ಲಿಸಲಾಗಿದ್ದ ನಾಲ್ಕು ಬೈಕ್‌ಗಳು ಸಂಪೂರ್ಣವಾಗಿ ಜಖಂಗೊಂಡಿವೆ.

ಕೇರಳದಿಂದ ಮಹಾರಾಷ್ಟ್ರದ ಕಡೆಗೆ ರಬ್ಬರ್‌ ತುಂಬಿಕೊಂಡು ಹೊರಟಿದ್ದ ಲಾರಿಯೊಂದು ಮೊದಲು ಅಪಘಾತಕ್ಕೀಡಾಗಿತ್ತು. ಈ ಲಾರಿಯನ್ನು ಕ್ರೇನ್ ಮೂಲಕ ಮೇಲೆತ್ತುವ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆಗಾಗಿ ರಸ್ತೆ ಸಂಚಾರವನ್ನು ತಡೆದು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು.

ಇದೇ ವೇಳೆ ಇಳಿಜಾರು ರಸ್ತೆಯಲ್ಲಿ ಅತಿವೇಗವಾಗಿ ಬಂದ ಮತ್ತೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ, ನೇರವಾಗಿ ಬ್ಯಾರಿಕೇಡ್ ದಾಟಿ ಹೈವೆ ಪೆಟ್ರೋಲ್ ವಾಹನಕ್ಕೆ ಭೀಕರವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಸಮೀಪದಲ್ಲಿದ್ದ ಬೈಕ್‌ಗಳ ಮೇಲೆ ವಾಹನಗಳು ಅಪ್ಪಳಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಒಂದು ವೇಳೆ ಈ ಲಾರಿ ಪೆಟ್ರೋಲ್ ವಾಹನಕ್ಕೆ ಡಿಕ್ಕಿಯಾಗದೆ ಮುಂದುವರಿದಿದ್ದರೆ, ಹತ್ತಿರದಲ್ಲೇ ಇದ್ದ ಸಾರ್ವಜನಿಕರು ಹಾಗೂ ಹೋಟೆಲ್ ಎದುರು ನಿಲ್ಲಿಸಿದ್ದ ವಾಹನಗಳಿಗೆ ನುಗ್ಗಿ ಇನ್ನೂ ದೊಡ್ಡ ಪ್ರಮಾಣದ ಪ್ರಾಣಾಪಾಯ ಸಂಭವಿಸಬಹುದಿತ್ತು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ವೃತ್ತನಿರೀಕ್ಷಕ ಸಂತೋಷ ಕಾಯ್ಕಿಣಿ ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

Topics

ಸಂಬಂಧಿತ ಸುದ್ದಿಗಳು