Kannada News Next

udupi

ಬೈಂದೂರು : ಉಗ್ರರೂಪ ತಾಳಿದ ರೈತರ ಹೋರಾಟ: ರಸ್ತೆ ತಡೆದು ಆಕ್ರೋಶ

ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಪ್ರತಿಭಟನೆ ಇಂದು ನಿರ್ಣಾಯಕ ಘಟ್ಟ ತಲುಪಿದೆ.

By Meghana Pranuth | ಮೇಘನಾ ಪ್ರಣೂತ್‌
byndoor

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಪ್ರತಿಭಟನೆ ಇಂದು ನಿರ್ಣಾಯಕ ಘಟ್ಟ ತಲುಪಿದೆ. ನೂರಾರು ರೈತರು, ಮಹಿಳೆಯರು ಹಾಗೂ ಮಕ್ಕಳು ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿಗಳೇ ಆಗಮಿಸಬೇಕೆಂದು ಪಟ್ಟು ಹಿಡಿದಿದ್ದಾರೆ.

ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರಿಸುವುದರಿಂದ ಗ್ರಾಮೀಣ ಜನರಿಗೆ ಹಾಗೂ ರೈತರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆಗ್ರಹಿಸಿ ಬೈಂದೂರಿನಲ್ಲಿ ರೈತರು ನಡೆಸುತ್ತಿರುವ ಹೋರಾಟ ಇಂದು ಉಗ್ರರೂಪ ತಾಳಿದೆ.

ಇಂದು ಬೆಳಿಗ್ಗೆ ಸೇನೇಶ್ವರ ದೇವಸ್ಥಾನದಿಂದ ಆರಂಭವಾದ ಬೃಹತ್ ಪ್ರತಿಭಟನಾ ಮೆರವಣಿಗೆಯು ತಾಲೂಕು ಕಚೇರಿವರೆಗೆ ಸಾಗಿತು. ಹಸಿರು ಶಾಲು ಬೀಸುತ್ತಾ, "ನ್ಯಾಯ ಬೇಕು" ಎಂಬ ಒಕ್ಕೊರಲ ಘೋಷಣೆಗಳೊಂದಿಗೆ ಮೆರವಣಿಗೆ ಯುದ್ದಕ್ಕೂ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಮುಖವಾಗಿ 'ನಾಡ ಪಂಚಾಯತ್' ಸೇರಿದಂತೆ ಒಟ್ಟು ಎಂಟು ಗ್ರಾಮಗಳನ್ನು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ತಕ್ಷಣವೇ ಕೈಬಿಡಬೇಕು ಮತ್ತು ಗ್ರಾಮಗಳಿಗೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂಬುದು ರೈತರ ಮುಖ್ಯ ಬೇಡಿಕೆಯಾಗಿದೆ. ರೈತ ಮುಖಂಡ ದೀಪಕ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಈ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದು, ಸ್ಥಳಕ್ಕೆ ಅಧಿಕಾರಿಗಳು ಬಂದರೂ ಜಗ್ಗದ ಪ್ರತಿಭಟನಾಕಾರರು ಮುಖ್ಯ ರಸ್ತೆ ತಡೆ ನಡೆಸಿ ಧರಣಿ ಕುಳಿತಿದ್ದಾರೆ.

ಈ ಹೋರಾಟಕ್ಕೆ ಮಹಿಳೆಯರು ಮತ್ತು ಮಕ್ಕಳು ಸಹ ಸಾಥ್ ನೀಡಿದ್ದು, ಬೈಂದೂರು ತಾಲೂಕಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳೇ ಸ್ವತಃ ಆಗಮಿಸಿ ಅಧಿಕೃತ ಭರವಸೆ ನೀಡಬೇಕು, ಇಲ್ಲವಾದಲ್ಲಿ ಇಂದು ಅಂತಿಮ ನಿರ್ಧಾರ ಕೈಗೊಂಡು ಹೋರಾಟವನ್ನು ಇನ್ನಷ್ಟು ಉಗ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.