News Next Kannada

udupi

ಹೆಜಮಾಡಿ ಟೋಲ್‌ ವಿನಾಯಿತಿ : ಉಡುಪಿ ಡಿಸಿ ಖಡಕ್‌ ವಾರ್ನಿಂಗ್‌

ಸಾಸ್ತಾನದಲ್ಲಿ ಟೋಲ್‌ ಗೇಟ್‌ನಿಂದ 10 ಕಿಲೋ ಮೀಟರ್‌ ವ್ಯಾಪ್ತಿಯಲ್ಲಿನ ಸ್ಥಳೀಯರಿಗೆ ಟೋಲ್‌ ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತಿದೆ.

By Arun Gundmi | ಅರುಣ್‌ ಗುಂಡ್ಮಿ Editor-in-Chief
hejamady toll exemption udupi dc strict warning

ಉಡುಪಿ ; ಕರಾವಳಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯ ಪ್ರಯಾಣಿಕರಿಗೆ ವಿನಾಯಿತಿ ನೀಡದೇ ಇರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಾಸ್ತಾನ ಮತ್ತು ಶಿರೂರು ಟೋಲ್‌ಗಳಲ್ಲಿ ಸ್ಥಳೀಯ ವಾಹನಗಳಿಗೆ ಶುಲ್ಕ ವಿನಾಯಿತಿ ನೀಡಲಾಗುತ್ತಿದೆ. ಅಂತೆಯೇ ಹೆಜಮಾಡಿಯಲ್ಲಿ ಈ ನಿಯಮ ಪಾಲನೆ ಆಗುತ್ತಿಲ್ಲ ಅನ್ನೋ ದೂರುಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಅವರ ನೇತೃತ್ವದಲ್ಲಿ ಅಧಿಕಾರಿಗಳು, ಗುತ್ತಿಗೆದಾರರ ಸಭೆ ನಡೆಸಲಾಯ್ತು.

ಸಾಸ್ತಾನದಲ್ಲಿ ಟೋಲ್‌ ಗೇಟ್‌ನಿಂದ 10 ಕಿಲೋ ಮೀಟರ್‌ ವ್ಯಾಪ್ತಿಯಲ್ಲಿನ ಸ್ಥಳೀಯರಿಗೆ ಟೋಲ್‌ ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತಿದೆ. ಇದೇ ಮಾದರಿಯನ್ನು ಹೆಜಮಾಡಿಯಲ್ಲಿಯೂ ಅನುಸರಿಸಿದ್ರೆ ಸ್ಥಳೀಯರಿಗೆ ಅನುಕೂಲವಾಗಲಿದೆ ಅನ್ನೋದು ಸ್ಥಳೀಯರ ಬೇಡಿಕೆ.

ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ರಾಷ್ಟ್ರೀಯ ಹೆದ್ದಾರಿ ಸುಂಕ ವಸೂಲಾತಿ ಕೇಂದ್ರವು ಸಾಸ್ತಾನ ಹಾಗೂ ಶಿರೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗೆ ನೀಡಿರುವ ರಿಯಾಯಿತಿಯನ್ನು ಹೆಜಮಾಡಿ ಭಾಗದ ಟೋಲ್ ವ್ಯಾಪ್ತಿಯ ಸ್ಥಳೀಯರಿಗೆ ನೀಡುವಂತೆ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆಯಲು ತೀರ್ಮಾನಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 66 ರ ಹೆಜಮಾಡಿ ಟೋಲ್‌ನ ವ್ಯಾಪ್ತಿಯಲ್ಲಿ ವಾಸವಿರುವ ಸ್ಥಳೀಯ ಸಾರ್ವಜನಿಕರು ತಮ್ಮ ದೈನಂದಿನ ಕಾರ್ಯಚಟುವಟಿಕೆಗಳಿಗೆ ದಿನದಲ್ಲಿ ಹಲವು ಬಾರಿ ಟೋಲ್‌ನಲ್ಲಿ ಹಾದು ಹೋಗುವ ಸಂದರ್ಭದಲ್ಲಿ ಪ್ರತಿಬಾರಿಯೂ ಶುಲ್ಕ ಪಾವತಿ ಮಾಡಲು ಅನಾನುಕೂಲತೆ ಉಂಟಾಗುತ್ತದೆ.

ಟೋಲ್ ಪ್ಲಾಜಾ ಸುತ್ತಮುತ್ತಲಿನ ಸ್ಥಳೀಯ ವಾಹನಗಳಿಗೆ ಹಾಗೂ ನಿಗದಿತ ವ್ಯಾಪ್ತಿಯಲ್ಲಿ ಬರುವ ನೋಂದಾಯಿತ ವಾಹನಗಳಿಗೆ ಸುಂಕ ವಿನಾಯಿತಿ ಅಥವಾ ಮಾಸಿಕ ಪಾಸ್ ಸೌಲಭ್ಯ ಕಲ್ಪಿಸಿದಲ್ಲಿ ಅವರುಗಳಿಗೆ ಅನುಕೂಲವಾಗಲಿದೆ ಅನ್ನೋ ಕುರಿತು ಚರ್ಚೆ ನಡೆಸಲಾಯ್ತು.

ರಾಷ್ಟ್ರೀಯ ಹೆದ್ದಾರಿ 66 ರ ಕೆಲವು ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆಗಳನ್ನು ನಿರ್ಮಾಣ ಮಾಡಲು ಅನುಮತಿ ನೀಡಲಾಗಿದೆ. ಸರ್ವಿಸ್‌ ರಸ್ತೆಯ ಕಾಮಗಾರಿಯನ್ನು ಶೀಘ್ರದಲ್ಲಿ ಆರಂಭಿಸಿ ಪೂರ್ಣಗೊಳಿಸಬೇಕು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸರ್ವೀಸ್ ರಸ್ತೆ, ರಸ್ತೆ ರಿಪ್ಲೆಕ್ಟರ್‌ಗಳ ಅಳವಡಿಕೆ, ದಾರಿದೀಪ ಅಳವಡಿಕೆ, ರಸ್ತೆಯಲ್ಲಿ ಹೊಂಡ-ಗುಂಡಿ ದುರಸ್ಥಿ, ಒಳಚರಂಡಿ ಕಾಮಗಾರಿ, ಜಂಕ್ಷನ್‌ಗಳಲ್ಲಿ ಸರಿಯಾದ ಸೂಚನಾ ಫಲಕ ಅಳವಡಿಸುವುದು ಸೇರಿದಂತೆ ಸುರಕ್ಷತಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸೂಚಿಸಲಾಗಿದೆ.

ರಾಷ್ಟ್ರೀಯ ಹೆದ್ದರಿಗಳಲ್ಲಿ ಅಪಘಾತಗಳ ಸಂಖ್ಯೆ ತೀವ್ರವಾಗಿ ಏರಿಕೆ ಆಗುತ್ತಿದ್ದು, ಅಪಘಾತಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಒತ್ತು ನೀಡಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಹೀಗಾಗಿ ಹೆಜಮಾಡಿ ಟೋಲ್‌ ವಿವಾದ ಸದ್ಯಕ್ಕೆ ಬಗೆ ಹರಿಯುವ ಎಲ್ಲಾ ಸೂಚನೆಗಳು ಗೋಚರಿಸುತ್ತಿದೆ.