ಬಾಗಲಕೋಟೆ ಉಪಚುನಾವಣೆಯ ಫಲಿತಾಂಶ ಪ್ರಕಟ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಭರ್ಜರಿ ಜಯ
ಉಮೇಶ್ ಮೇಟಿ ಅವರು ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರನ್ನು 22,867 ಮತಗಳ ಭಾರಿ ಅಂತರದಿಂದ ಸೋಲಿಸಿದ್ದಾರೆ.
ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಭರ್ಜರಿ ಜಯ ಸಾಧಿಸಿದ್ದಾರೆ. ತಮ್ಮ ತಂದೆ ಮತ್ತು ಮಾಜಿ ಶಾಸಕರಾದ ದಿವಂಗತ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಕ್ಷೇತ್ರವನ್ನು ಕಾಂಗ್ರೆಸ್ ಉಳಿಸಿಕೊಂಡಿದೆ.
ಉಮೇಶ್ ಮೇಟಿ ಅವರು ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರನ್ನು 22,867 ಮತಗಳ ಭಾರಿ ಅಂತರದಿಂದ ಸೋಲಿಸಿದ್ದಾರೆ.
ಇತ್ತೀಚಿನ ವರದಿಗಳ ಪ್ರಕಾರ, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಒಟ್ಟು 97941ಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ ವೀರಣ್ಣ ಚರಂತಿಮಠ ಅವರು ಈ ಚುನಾವಣೆಯಲ್ಲಿ ಎರಡನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು.
ಈ ಗೆಲುವಿನೊಂದಿಗೆ ಕಾಂಗ್ರೆಸ್ ಪಕ್ಷವು ಬಾಗಲಕೋಟೆ ಕ್ಷೇತ್ರದಲ್ಲಿ ತನ್ನ ಹಿಡಿತವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಉಮೇಶ್ ಮೇಟಿ ಅವರು ತಮ್ಮ ತಂದೆಯ ರಾಜಕೀಯ ಪರಂಪರೆಯನ್ನು ಮುಂದುವರಿಸಲಿದ್ದಾರೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಯಲ್ಲಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶ್ರೀನಿವಾಸ ಟಿ. ದಾಸಕರಿಯಪ್ಪ ಅವರಿಗಿಂತ 7,916 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
11ನೇ ಸುತ್ತಿನ ಎಣಿಕೆಯ ಅಂತ್ಯಕ್ಕೆ ಸಮರ್ಥ್ ಅವರು 37,419 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಶ್ರೀನಿವಾಸ ಅವರು 29,503 ಮತಗಳನ್ನು ಪಡೆದಿದ್ದಾರೆ. ಹಿರಿಯ ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಈ ಉಪಚುನಾವಣೆ ನಡೆದಿದ್ದು, ಅವರ ಮೊಮ್ಮಗ ಸಮರ್ಥ್ ಈ ಕ್ಷೇತ್ರದಲ್ಲಿ ಕುಟುಂಬದ ರಾಜಕೀಯ ಪರಂಪರೆಯನ್ನು ಮುಂದುವರಿಸಲು ಸ್ಪರ್ಧಿಸಿದ್ದಾರೆ.



