ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆ
ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯಲ್ಲಿ ಈ ಅಧಿಕೃತ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವದ ಬದಲಾವಣೆಗೆ ಕೊನೆಗೂ ತೆರೆ ಬಿದ್ದಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ (New Chief Minister) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್(DK Shivakumar) ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯಲ್ಲಿ ಈ ಅಧಿಕೃತ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರ ಹೆಸರು ಮುಂಚೂಣಿಗೆ ಬಂದಿತ್ತು. ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಔಪಚಾರಿಕ ಪ್ರಕ್ರಿಯೆಗಳ ಬಳಿಕ ಅವರನ್ನು ನೂತನ ನಾಯಕನನ್ನಾಗಿ ಅಧಿಕೃತವಾಗಿ ಘೋಷಿಸಲಾಯಿತು. ಕಳೆದ ಮೂರು ವರ್ಷಗಳ ಕಾಲ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಡಿಕೆಶಿ, ಇದೀಗ ರಾಜ್ಯದ ಅತ್ಯುನ್ನತ ಗದ್ದುಗೆಯನ್ನು ಅಲಂಕರಿಸಲಿದ್ದಾರೆ.
ಸಿಎಲ್‌ಪಿ ಸಭೆಗೆ ಆಗಮಿಸುವ ಮುನ್ನ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಕೊಠಡಿಯಲ್ಲಿ ತಮ್ಮ ಆರಾಧ್ಯ ದೈವ ನೊಣವಿನಕೆರೆಯ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಹೈಕಮಾಂಡ್ ಸಭೆಯಲ್ಲಿ ಎಐಸಿಸಿ ವೀಕ್ಷಕರಾಗಿ ಹಿರಿಯ ನಾಯಕರಾದ ಜೈರಾಮ್ ರಮೇಶ್, ಕೆ.ಸಿ. ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಭಾಗವಹಿಸಿದ್ದರು.
ಸಭೆ ಆರಂಭವಾಗುತ್ತಿದ್ದಂತೆ ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರು ಸಭಾಂಗಣದಲ್ಲಿದ್ದ ಪ್ರತಿಯೊಬ್ಬ ಶಾಸಕರಿದ್ದ ಜಾಗಕ್ಕೆ ಖುದ್ದಾಗಿ ತೆರಳಿ, ಹಸ್ತಲಾಘವ (Handshake) ಮಾಡುವ ಮೂಲಕ ಎಲ್ಲರ ಗಮನ ಸೆಳೆದರು ಮತ್ತು ಬೆಂಬಲಕ್ಕೆ ಧನ್ಯವಾದ ಅರ್ಪಿಸಿದರು.
ಜೂನ್ 3ರಂದು ಸರಳವಾಗಿ ಪ್ರಮಾಣ ವಚನ ಸ್ವೀಕಾರ:
ನೊಣವಿನಕೆರೆಯ ಕಾಡುಸಿದ್ದೇಶ್ವರ ಮಠದ ಸ್ವಾಮೀಜಿಗಳ ಮಾರ್ಗದರ್ಶನ ಹಾಗೂ ನಿಗದಿಪಡಿಸಿದ ಶುಭ ಮುಹೂರ್ತದ ಅನ್ವಯ ಪ್ರಮಾಣ ವಚನಕ್ಕೆ ದಿನಾಂಕ ನಿಗದಿಪಡಿಸಲಾಗಿದೆ. ಜೂನ್ 3ರ ಬುಧವಾರ ಸಂಜೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.
ಯಾವುದೇ ರೀತಿಯ ಆಡಂಬರ ಅಥವಾ ಅದ್ಧೂರಿ ಬಿಲ್ಡಪ್ ಇಲ್ಲದೆ, ಬೆಂಗಳೂರಿನ ರಾಜಭವನ ಸಮೀಪದ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಅತ್ಯಂತ ಸರಳವಾಗಿ ಈ ಕಾರ್ಯಕ್ರಮ ಜರುಗಲಿದೆ. ಪ್ರಸ್ತುತ ಎದುರಾಗಿರುವ ಇಂಧನ ಬಿಕ್ಕಟ್ಟು ಹಾಗೂ ನಗರದ ಸಂಚಾರ ದಟ್ಟಣೆಯನ್ನು (Traffic) ನಿಯಂತ್ರಿಸುವ ನಿಟ್ಟಿನಲ್ಲಿ ಹೈಕಮಾಂಡ್ ಸೂಚನೆಯ ಮೇರೆಗೆ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ನಡೆಸಲು ನಿರ್ಧರಿಸಲಾಗಿದೆ.



