ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಿದ ಡಿ.ಕೆ. ಶಿವಕುಮಾರ್

ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಪ್ರಮುಖ ನಾಯಕರೊಂದಿಗೆ ತೆರಳಿದ ಅವರು, ಅಧಿಕೃತವಾಗಿ ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.

ಬೆಂಗಳೂರು: ಶನಿವಾರ ನಡೆದ ಹಿರಿಯ ನಾಯಕರ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನೂತನ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ಅವರು ಶನಿವಾರ ರಾತ್ರಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದರು. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಪ್ರಮುಖ ನಾಯಕರೊಂದಿಗೆ ತೆರಳಿದ ಅವರು, ಅಧಿಕೃತವಾಗಿ ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.

ಡಿ.ಕೆ. ಶಿವಕುಮಾರ್ ಅವರು ಶಾಸಕರ ಬೆಂಬಲವಿರುವ ಅಧಿಕೃತ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಹಿರಿಯ ನಾಯಕರಾದ ಕೆ.ಜೆ. ಜಾರ್ಜ್, ಎನ್.ಎ. ಹ್ಯಾರಿಸ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಡಿ.ಕೆ. ಶಿವಕುಮಾರ್ ಸಲ್ಲಿಸಿದ ಪತ್ರವನ್ನು ಪರಿಶೀಲಿಸಿದ ರಾಜ್ಯಪಾಲರು, ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಅವರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೂ ಮುನ್ನ ವಿಧಾನಸೌಧದಲ್ಲಿ ನಡೆದ ಸಿಎಲ್‌ಪಿ ಸಭೆಯ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮಾಧ್ಯಮಗಳಿಗೆ ಪ್ರಮುಖ ವಿವರಗಳನ್ನು ಹಂಚಿಕೊಂಡರು. “ಕಾಂಗ್ರೆಸ್ ಹೈಕಮಾಂಡ್ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಅಂತಿಮಗೊಳಿಸಿತ್ತು. ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ನೀಡಿದ್ದ ರಾಜೀನಾಮೆ ಪ್ರಕ್ರಿಯೆಯನ್ನು ಅಂಗೀಕರಿಸಲಾಯಿತು.

ತದನಂತರ, ಹೈಕಮಾಂಡ್ ನಿರ್ಣಯವನ್ನು ಸ್ವತಃ ಸಿದ್ದರಾಮಯ್ಯ ಅವರೇ ಸಭೆಯಲ್ಲಿ ಘೋಷಿಸಿದರು. ಹಿರಿಯ ನಾಯಕ ಜಿ. ಪರಮೇಶ್ವರ್ ಅವರು ಇದನ್ನು ಅನುಮೋದಿಸಿದರು. ಇದರೊಂದಿಗೆ ಡಿ.ಕೆ.ಶಿವಕುಮಾರ್ ಅವರು ಅವಿರೋಧವಾಗಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದರು” ಎಂದು ತಿಳಿಸಿದರು.

ಅಧಿಕಾರ ಹಂಚಿಕೆ ಹಾಗೂ ನಾಯಕತ್ವ ಬದಲಾವಣೆ ವಿಷಯ ಬಂದಾಗ ರಾಜ್ಯದಲ್ಲಿ ದೊಡ್ಡ ಮಟ್ಟದ ರಾಜಕೀಯ ಕೋಲಾಹಲ ಸೃಷ್ಟಿಯಾಗಬಹುದು ಎಂದು ವಿರೋಧ ಪಕ್ಷಗಳು ಮತ್ತು ಸಾರ್ವಜನಿಕರು ಭಾವಿಸಿದ್ದರು. ಆದರೆ ಈ ಎಲ್ಲಾ ವದಂತಿಗಳಿಗೆ ಕೆ.ಸಿ. ವೇಣುಗೋಪಾಲ್ ತೆರೆ ಎಳೆದಿದ್ದಾರೆ. “ನಾವೆಲ್ಲರೂ ಒಂದು ಸುದೃಢ ಕುಟುಂಬದಂತೆ ಒಗ್ಗಟ್ಟಿನಿಂದ ಇದ್ದೇವೆ.

ಇದು ಕಾಂಗ್ರೆಸ್ ಪಕ್ಷದ ಶಕ್ತಿ. ಸಿದ್ದರಾಮಯ್ಯ ಅವರ ಪೂರ್ಣ ಬೆಂಬಲದೊಂದಿಗೆ, ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮತ್ತೆ ಭರ್ಜರಿಯಾಗಿ ಅಧಿಕಾರಕ್ಕೆ ಬರಲಿದೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

 

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories