ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಸಜ್ಜಾದ ಕಡಲ ನಗರಿ

ಮಂಗಳೂರು : ಕಡಲನಗರಿ ಮಂಗಳೂರಲ್ಲಿ ನಾಳೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಸರ್ವ ರೀತಿಯಲ್ಲಿಯೂ ಸಜ್ಜಾಗಿದ್ದು ನಗರ ತುಂಬೆಲ್ಲಾ ಬಿಜೆಪಿಯ ಬ್ಯಾನರ್, ಬಂಟಿಂಗ್ಸ್ ಗಳೇ ರಾರಾಜಿಸುತ್ತಿವೆ.

ಬಿಜೆಪಿಯ ಶಕ್ತಿ ಕೇಂದ್ರ ಎನಿಸಿರುವ ಕಡಲನಗರಿ ಮಂಗಳೂರಿನಲ್ಲಿ 20 ವರ್ಷಗಳ ನಂತರ ಮೊದಲ ಬಾರಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ನಡೆಯುತ್ತಿರುವ ಕಾರ್ಯಕಾರಿಣಿ ಸಭೆ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ.

ನಗರದ ಟಿ.ವಿ ರಮಣ್ ಪೈ ಸಭಾಂಗಣದಲ್ಲಿ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಲಿದ್ದು, ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಡಿ.ವಿ ಸದಾನಂದ ಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮುಂತಾದ ಬಿಜೆಪಿ ನಾಯಕರು ಪಾಲ್ಗೊಳ್ಳಲಿದ್ದಾರೆ.

ಇನ್ನು ಸಂಜೆ 5 ಗಂಟೆಗೆ ಓಶಿಯನ್ ಪರ್ಲ್ ಹೋಟೆಲ್ ನಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ. ಕಾರ್ಯಕಾರಿಣಿ ಸಭೆಯ ಸಲಹೆ, ಸೂಚನೆಗಳು ಆಯಾ ಜಿಲ್ಲೆ, ಮಂಡಲಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ. ಸಮಾರೋಪದಲ್ಲಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮಾರ್ಗದರ್ಶನ ನೀಡಲಿದ್ದಾರೆ.

ಇನ್ನು ಮುಂದೆ ಪ್ರತಿ ತಿಂಗಳು ಪ್ರತಿ ಜಿಲ್ಲೆಯಲ್ಲಿ ಕಾರ್ಯಕಾರಿಣಿ ಸಭೆ ನಡೆಸಲು ಬಿಜೆಪಿ ತೀರ್ಮಾನಿಸಿದೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಈ ನಿರ್ಧಾರ ಮಾಡಿದೆ. ಈ ಮೂಲಕ ಜಿಲ್ಲೆಯ ಕಾರ್ಯಕರ್ತರಿಗೆ ಶಕ್ತಿ ತುಂಬುವುದು ಬಿಜೆಪಿಯ ಪ್ಲ್ಯಾನ್ ಆಗಿದೆ.

ಕಾರ್ಯಕಾರಿಣಿ ಹಾಗೂ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ನಡೆದಿರುವ ಹಲವಾರು ಮಹತ್ವದ ವಿದ್ಯಮಾನಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ. ಎರಡೂ ಸಭೆಯನ್ನು ವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾ ಬಿಜೆಪಿ ಈಗಾಗಲೇ ಸಿದ್ದತೆಗಳನ್ನು ಮಾಡಿಕೊಂಡಿದೆ. ಸಭೆಯಲ್ಲಿ ಪಕ್ಷ ಸಂಘಟನೆ, ಮುಂದಿನ ಕಾರ್ಯಯೋಜನೆ, ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

ಸಭೆಯಲ್ಲಿ ರಾಜ್ಯ ಸಮಿತಿ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ 120 ಮಂದಿ ಭಾಗವಹಿಸಲಿದ್ದಾರೆ. ಕೇಂದ್ರದ ಯೋಜನೆಗಳು ಮತ್ತು ವರಿಷ್ಠರ ಸಲಹೆ, ಸೂಚನೆಗಳ ಬಗ್ಗೆ ಚರ್ಚೆಯಾಗಲಿದೆ.

Comments are closed.