ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅಧಿಕಾರಾವಧಿಯಲ್ಲಿ ದೇಶಾದ್ಯಂತ ಜಾರಿಗೆ ಬಂದಿದ್ದ ಮನರೇಗಾ ಯೋಜನೆ ರದ್ದು ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟಕ್ಕೆ ಇಳಿದಿದೆ. ಇಂದು ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಂಡಿದೆ. ಇದರಲ್ಲಿ ಭಾಗಿಯಾಗಲು ಈಗಾಗಲೇ ಕೆ.ಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.
ಇನ್ನು ಇದಾದ ಬಳಿಕ ‘ಮನರೇಗಾ ಬಚಾವ್ ಸಂಗ್ರಾಮ’ದ ಅಡಿಯಲ್ಲಿ ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ. ಮನರೇಗಾ ಯೋಜನೆ ರದ್ದುಗೊಳಿಸುವ ಮೂಲಕ ಕೇಂದ್ರ ಸರ್ಕಾರವು ಗ್ರಾಮೀಣ ಭಾಗದ ಜನತೆಯ ಉದ್ಯೋಗ ಕಸಿದಿದೆ. ಆರ್ಥಿಕ ಭದ್ರತೆಗೆ ಪೆಟ್ಟು ನೀಡಿದೆ. ಕೇಂದ್ರ ಸರ್ಕಾರ ಪ್ರಸ್ತುತ ಜಾರಿಗೆ ತಂದಿರುವ ರಾಮ್ ಜೀ ಕಾಯ್ದೆಯು ಅವೈಜ್ಞಾನಿಕವಾಗಿದೆ ಎಂದು ಕಾಂಗ್ರೆಸ್ನ ಆರೋಪವಾಗಿದೆ.
ಇನ್ನು ಇತ್ತ ಬಿಜೆಪಿ ಕೂಡ ಇಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದೆ.
ಇದನ್ನೂ ಓದಿ: ರಾಜ್ಯಪಾಲರ ಗಣರಾಜ್ಯೋತ್ಸವ ಭಾಷಣದಲ್ಲಿ ಕೇಂದ್ರದ ವಿರುದ್ಧದ ಟೀಕೆಗೆ ಬ್ರೇಕ್!
ಕಾಂಗ್ರೆಸ್ ನಾಯಕರು ರಾಜಭವನ ಚಲೋ ನಡೆಸಿದ್ರೆ ಬಿಜೆಪಿ ನಾಯಕರು ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆಗೆ ಮುಂದಾಗಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿ ನಾಯಕರು ಇಂದು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಶಾಸಕರ ನಡವಳಿಕೆ, ಅಬಕಾರಿ ಇಲಾಖೆಯ ಲಂಚ ಪ್ರಕರಣ, ಹದಗೆಟ್ಟ ಕಾನೂನು ಸುವ್ಯವಸ್ಥೆ ಸೇರಿದಂತೆ ಸರ್ಕಾರದ ವೈಫಲ್ಯಗಳ ವಿರುದ್ಧ ಈ ಪ್ರತಿಭಟನೆ ನಡೆಯಲಿದೆ.

