ಚಿಕ್ಕಮಗಳೂರು : ಕಳೆದ ಮೂರ್ನಾಲ್ಕು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್. ಆರ್.ಪುರ, ಕಳಸ ಹಾಗೂ ಚಿಕ್ಕಮಗಳೂರು ( ಅಂಬಳೆ ಮತ್ತು ಲಕ್ಯಾ ಹೋಬಳಿ) ತಾಲೂಕು ವ್ಯಾಪ್ತಿಯಲ್ಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 9 ರ ವರೆಗೆ ರಜೆಯನ್ನು (Chikkamagalore heavy rains) ಘೋಷಣೆ ಮಾಡಲಾಗಿದೆ.
ಕಾಫಿನಾಡಿನಲ್ಲಿ ಮಳೆಯು ನಿರಂತರವಾಗಿ ಸುರಿಯುತ್ತಿರುವುದರಿಂದಾಗಿ ಮಲೆನಾಡಿನ ಭಾಗದಲ್ಲಿನ ವಿದ್ಯಾರ್ಥಿಗಳು ಶಾಲೆಗೆ ಬರಲು ಕಷ್ಟಸಾಧ್ಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಇದರಿಂದಾಗಿ ಜಿಲ್ಲೆ ತುಂಗಾ, ಭದ್ರಾ ಹಾಗೂ ಹೇಮಾವತಿ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಅದ್ರಲ್ಲೂ ಚಿಕ್ಕಮಗಳೂರು ಹಾಗೂ ಹೊರನಾಡು ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಯ ಭೀತಿ ಎದುರಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದ್ದು, ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಯಲ್ಲಿನ ಶಾಲೆ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಕಳೆದ ಎರಡು ದಿನಗಳಿಂದಲೂ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ಮುನ್ಸೂಚನೆಯ ಮೇರೆಗೆ ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲೆ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಆದೇಶ ಹೊರಡಿಸಿದ್ದಾರೆ. ಅಲ್ಲದೇ ನಾಳೆ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ನೀಡಲಾಗಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಮಂಗಳೂರು, ಬಂಟ್ವಾಳ, ಮೂಲ್ಕಿ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಕೇರಳ ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ಬಹುತೇಕ ಕಡೆಗಳಲ್ಲಿ ಕೃತಕ ನೆರೆ ಹಾವಳಿ ಉಂಟಾಗಿದ್ದು, ವಾಹನ ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದೆ. ಮಾತ್ರವಲ್ಲ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ರಜೆಯನ್ನು ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ : ಉಡುಪಿ, ದ.ಕ ಸೇರಿ ಕರಾವಳಿ ಮಲೆನಾಡಿನ ಶಾಲೆಗ ಕಾಲೇಜುಗಳಿಗೆ ರಜೆ ಘೋಷಣೆ
ಇದನ್ನೂ ಓದಿ : Chandrasekhar Guruji : ಚಂದ್ರಶೇಖರ್ ಗುರೂಜಿ ಯಾರು : ಇವರ ಹಿನ್ನೆಲೆ ಏನು, ಇಲ್ಲಿದೆ ಮಾಹಿತಿ
Chikkamagalore heavy rains, holidays have been declared for schools of these taluks till July 9