ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದು ಕಾಂಗ್ರೆಸ್ ಶಾಸಕ: ವಿಧಾನಪರಿಷತ್ನಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ತೀವ್ರ ಜಟಾಪಟಿ
Karnataka Assembly Session: ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಸದಸ್ಯರೊಬ್ಬರು ನೀಡಿದ್ದಾರೆನ್ನಲಾದ ಹೇಳಿಕೆ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮೇಲ್ಮನೆಯಲ್ಲಿ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ, ಸಿಎಂ ರಾಜಕೀಯ ಕಾರ್ಯದರ್ಶಿಯೂ ಆಗಿರುವ ವಿಧಾನಪರಿಷತ್ ಸದಸ್ಯ ನಜೀರ್ ಅಹ್ಮದ್ ಅವರು ಪ್ರಧಾನಿ ಮೋದಿ ಅವರನ್ನು ‘ದೇಶದ್ರೋಹಿ’ ಎಂದು ಕರೆದಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಹೇಳಿಕೆಯಿಂದ ಆಕ್ರೋಶಗೊಂಡ ಬಿಜೆಪಿ ಸದಸ್ಯರು ತಕ್ಷಣವೇ ಸದನದ ಬಾವಿಗಿಳಿದು ಧರಣಿ ಆರಂಭಿಸಿದರು. ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದ ವಿಪಕ್ಷಗಳು, ನಜೀರ್ ಅಹ್ಮದ್ ಅವರು ಬೇಷರತ್ ಕ್ಷಮೆ ಕೇಳಲೇಬೇಕೆಂದು ಪಟ್ಟು ಹಿಡಿದರು.
ಸದನದಲ್ಲಿ ಉಭಯ ಪಕ್ಷಗಳ ನಡುವಿನ ವಾಗ್ವಾದವು ಅತಿರೇಕಕ್ಕೆ ಹೋಗಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದ ಸಭಾಪತಿ ಬಸವರಾಜ್ ಹೊರಟ್ಟಿ ಅವರು, ಗದ್ದಲ ನಿಮಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕಲಾಪವನ್ನು ಮರುದಿನಕ್ಕೆ (ಫೆಬ್ರವರಿ 3) ಮುಂದೂಡಿದರು. ಆದರೂ ಬಿಜೆಪಿ ಸದಸ್ಯರು ಸದನದಲ್ಲಿ ತಮ್ಮ ಧರಣಿಯನ್ನು ಮುಂದುವರಿಸಿದ್ದು, ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಗೃಹಲಕ್ಷ್ಮೀ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ: ಸಚಿವ ಲಕ್ಷ್ಮೀ ಹೆಬ್ಬಾಳಕರ್
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಪ್ರಧಾನಿಯವರನ್ನು ಅತ್ಯಂತ ಕೀಳಾಗಿ ನಿಂದಿಸಿರುವುದು ಅಕ್ಷಮ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಜೀರ್ ಅಹ್ಮದ್ ಅವರನ್ನು ಸದನದಿಂದ ಅಮಾನತುಗೊಳಿಸುವಂತೆ ಅವರು ಒತ್ತಾಯಿಸಿದ್ದು, ಕ್ರಮ ಕೈಗೊಳ್ಳದಿದ್ದರೆ ಕಲಾಪ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಮತ್ತೊಂದೆಡೆ, ಈ ಆರೋಪವನ್ನು ತಳ್ಳಿಹಾಕಿರುವ ನಜೀರ್ ಅಹ್ಮದ್, ತಾವು ಅಂತಹ ಯಾವುದೇ ಅವಹೇಳನಕಾರಿ ಮಾತುಗಳನ್ನು ಆಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.



