ಬೆಂಗಳೂರು : ಕಳೆದ ಹಲವು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯ ಬೆನ್ನಲ್ಲೇ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯ ಅಬ್ಬರ ಜೋರಾಗಿರಲಿದೆ. ಜುಲೈ 28 ರವರೆಗೆ ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಹಾಗೂ ನಂತರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಈಗಾಗಲೇ ಮಹಾಮಳೆಗೆ ಪ್ರವಾಹ ಉಂಟಾಗಿದೆ. ಅಲ್ಲದೇ ಬೆಳಗಾವಿ, ಧಾರವಾಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆಯನ್ನು ನೀಡಲಾಗಿದೆ. ಅಲ್ಲದೇ ಸಮುದ್ರದಲ್ಲಿ ನೀರಿನ ಮಟ್ಟ ಏರಿಕೆಯಾಗಲಿದ್ದು, ಭಾರೀ ಅಲೆಗಳು ಅಪ್ಪಳಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಯಾವುದೇ ಕಾರಣಕ್ಕೂ ನದಿಗೆ ಇಳಿಯದಂತೆ ಮುನ್ಸೂಚನೆಯನ್ನು ನೀಡಲಾಗಿದೆ.