ಪುನೀತ್ ಕೆರೆಹಳ್ಳಿ, ವಸಂತ್ ಗಿಳಿಯಾರ್ ಮತ್ತು ಕಿರಿಕ್ ಕೀರ್ತಿ ವಿರುದ್ಧ ಎಫ್ಐಆರ್ ದಾಖಲು
Puneeth Kerehalli | Vasanth Giliyar | Kiriki Keerthi: ಬೆಂಗಳೂರಿನ ಎಸ್ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ, ವಸಂತ ಗಿಳಿಯಾರ್ ಮತ್ತು ಕಿರಿಕ್ ಕೀರ್ತಿ ವಿರುದ್ಧ ವ್ಯಕ್ತಿಯೊಬ್ಬರಿಗೆ ಬೆದರಿಕೆ ಹಾಕಿದ ಹಾಗೂ ನಿಂದಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ನ್ಯಾಯಾಲಯದ ನಿರ್ದೇಶನದ ಮೇರೆಗೆ ಫೆಬ್ರವರಿ 2 ರಂದು ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಕರ್ನಾಟಕ ರಣಧೀರ ಪಡೆಯ ಅಧ್ಯಕ್ಷ ಬೈರಪ್ಪ ಹರೀಶ್ ಕುಮಾರ್ ಎಂಬುವವರು ಈ ದೂರು ನೀಡಿದ್ದಾರೆ. ದೂರಿನ ಅನ್ವಯ, ಕಳೆದ ವರ್ಷ ಅಕ್ಟೋಬರ್ 9 ರಂದ ಸುದ್ದಿ ವಾಹಿನಿಯೊಂದರಲ್ಲಿ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಹರೀಶ್ ಕುಮಾರ್ ಮತ್ತು ವಸಂತ ಗಿಳಿಯಾರ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿತ್ತು.
ಚರ್ಚೆ ಮುಗಿದ ನಂತರ, ವಸಂತ ಗಿಳಿಯಾರ್ ಅವರ ಪ್ರಚೋದನೆಯ ಮೇರೆಗೆ ಪುನೀತ್ ಕೆರೆಹಳ್ಳಿ ಬೆಂಬಲಿಗರು ಹರೀಶ್ ಕುಮಾರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಅಡಿಯಲ್ಲಿ ಶಾಂತಿ ಭಂಗಕ್ಕೆ ಪ್ರಚೋದನೆ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ವಿವಿಧ ಕಲಂಗಳಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ತಿಳಿಸಿದೆ.



