ಮುಂದಿನ 24 ಗಂಟೆ ಭಾರೀ ಮಳೆ ಮುನ್ಸೂಚನೆ; ಉಡುಪಿ, ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಬಿರುಸುಗೊಂಡಿದ್ದು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ಮಲೆನಾಡು ಮತ್ತು ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಜಿಲ್ಲಾವಾರು ಅಲರ್ಟ್‌ಗಳನ್ನು ಪ್ರಕಟಿಸಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯ ನಿರೀಕ್ಷೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿಂದ ಆರೆಂಜ್ ಅಲರ್ಟ್ ಜಾರಿಯಲ್ಲಿದೆ.

ಇದೇ ವೇಳೆ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಸ್ಥಳೀಯ ಆಡಳಿತ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಕರಾವಳಿ ಭಾಗಗಳಲ್ಲಿ ಗಂಟೆಗೆ 50ರಿಂದ 60 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಈ ಕಾರಣದಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ. ಬೆಳಗಾವಿ ಜಿಲ್ಲೆಯ ಕೆಲವೆಡೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯೂ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಾಮರಾಜನಗರ, ದಾವಣಗೆರೆ, ಬಳ್ಳಾರಿ ಸೇರಿದಂತೆ ಹಲವು ಒಳನಾಡು ಜಿಲ್ಲೆಗಳಲ್ಲಿ 40ರಿಂದ 60 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಸಾಧಾರಣದಿಂದ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ನಿವಾಸಿಗಳು, ವಾಹನ ಸವಾರರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Sai Teja | ಸಾಯಿತೇಜ

Sai Teja | ಸಾಯಿತೇಜ ಕಳೆದ 7 ವರ್ಷಗಳ ಡಿಜಿಟಲ್ ಮೀಡಿಯಾ ಅನುಭವ ಹೊಂದಿದ್ದಾರೆ. ಸಾಯಿತೇಜಾ ಅವರು, ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ತಂತ್ರಜ್ಞಾನ ಹಾಗೂ ಬಿಸಿನೆಸ್, ಆಟೋಮೊಬೈಲ್‌ ಕ್ಷೇತ್ರದ ಪತ್ರಿಕೋದ್ಯಮದಲ್ಲಿ ಪರಿಣತಿಯನ್ನು ಹೊಂದಿದ್ದಾರೆ. ಆನ್‌ಲೈನ್‌ ಸುದ್ದಿ ಲೋಕದಲ್ಲಿ ಅಪಾರವಾದ ಜ್ಞಾನವನ್ನು ಹೊಂದಿದ್ದಾರೆ. ಕನ್ನಡ ನ್ಯೂಸ್‌ ನೆಕ್ಸ್ಟ್‌ನಲ್ಲಿ ಉಪ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. More »