ಬೆಂಗಳೂರು : ಕಳೆದ ಮೂರ್ನಾಲ್ಕು ದಿನಗಳಿಂದಲೂ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ರೆ, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಂದು ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಗಂಟೆಗೆ ಸುಮಾರು 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆಯನ್ನು ನೀಡಲಾಗಿದೆ.

ಕಳೆದ ನಾಲ್ಕು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಇದರಿಂದಾಗಿ ಮಲೆನಾಡಿನ ಹಲವು ಪ್ರದೇಶಗಳು ಜಲಾವೃತವಾಗಿದ್ದು, ನದಿಗಳು ಉಕ್ಕಿ ಹರಿಯುತ್ತಿದೆ. ಇನ್ನು ಕೊಡಗು ಜಿಲ್ಲೆಯಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದ್ದು, ಗುಡ್ಡ ಪ್ರದೇಶದಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಅಲ್ಲದೇ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಉತ್ತರ ಕರ್ನಾಟಕ ಭಾಗಗಳಲ್ಲಿಯೂ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದಲೂ ರಣ ಮಳೆ ಸುರಿಯುತ್ತಿದ್ದು, ಕೃಷ್ಣಾ ಹಾಗೂ ಘಟಪ್ರಭಾ ನದಿಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಅಲ್ಲದೇ ಭಾರೀ ಮಳೆಗೆ ಕಾಕತಿ ಗ್ರಾಮದ ಸಿದ್ರಾಯಿ ಸುತಗಟ್ಟಿ ಎಂಬಾತ ಮಾರ್ಕಂಡೇಯ ನದಿಯಲ್ಲಿ ಕೊಚ್ಚಿ ಹೋಗಿದ್ದಾನೆ. ಇನ್ನು ನದಿಗಳು ಉಕ್ಕಿ ಹರಿದಿದ್ದು, ಸಾವಿರಾರು ಎಕರೆ ಕೃಷಿ ಭೂಮಿ ಜಲಾವೃತವಾಗಿದೆ. ಅಷ್ಟೇ ಅಲ್ಲಾ ಬಾಗಲಕೋಟೆ ಜಿಲ್ಲೆಯಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಿದೆ.