ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಾವಳಿಯ ನಡುವಲ್ಲೇ ಬ್ಲ್ಯಾಕ್ ಫಂಗಸ್ ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಬರೋಬ್ಬರಿ 1,250 ಮಂದಿಗೆ ಸೋಂಕು ದೃಢಪಟ್ಟಿದ್ದು, 39 ಮಂದಿಯನ್ನು ಮಾರಕ ಬ್ಲ್ಯಾಕ್ ಫಂಗಸ್ ಬಲಿ ಪಡೆದಿದೆ.
ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಈ ಕುರಿತು ಮಾಹಿತಿಯನ್ನು ನೀಡಿದ್ದು, ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಗೆ ಸರಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಅಲ್ಲದೇ ಬ್ಲ್ಯಾಕ್ ಫಂಗಸ್ ಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಔಷಧ ನೀಡುವ ಕುರಿತು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಅಲ್ಲದೇ 8 ಕಂಪೆನಿಗಳ ಜೊತೆಗೆ ಮಾತುಕತೆ ನಡೆಸಿದ್ದೇವೆ ಎಂದಿದ್ದಾರೆ.
ಬ್ಲ್ಯಾಕ್ ಫಂಗಸ್ ಗೆ 39 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿಯಿದೆ. ಈ ಕುರಿತು ಡೆತ್ ಆಡಿಟ್ ಮಾಡಿ ನಿಖರವಾದ ಮಾಹಿತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ. ಬ್ಲ್ಯಾಕ್ ಫಂಗಸ್ ಸೋಂಕನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.