Karnataka Budget 2023 : ಪಠ್ಯ ಪರಿಷ್ಕರಣೆ, 10ನೇ ತರಗತಿ ವಿದ್ಯಾರ್ಥಿಗಳಿಗೆ ವಾರಕ್ಕೆರಡು ದಿನ ಮೊಟ್ಟೆ : ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು ?

ಬೆಂಗಳೂರು : Karnataka Budget 2023 : ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಜಾರಿ ಮಾಡಲಾಗಿದೆ. ಪ್ರಮುಖವಾಗಿ ಹಿಂದಿನ ಸರಕಾರ ಪಠ್ಯ ಪರಿಷ್ಕರಣೆಯಲ್ಲಿ ಸೇರ್ಪಡೆಗೊಳಿಸಿದ್ದ ಪಠ್ಯಗಳನ್ನು ಕೈಬಿಡಲು ನಿರ್ಧರಿಸಲಾಗಿದೆ. ಅಲ್ಲದೇ ಸರಕಾರ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಬಾರಿ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣನ್ನು ವಿತರಿಸಲಾಗುತ್ತಿದ್ದು, ಈಗ ವಾರದಲ್ಲಿ ಎರಡು ದಿವಸ ವಿತರಿಸಲಾಗುವುದು. ಪ್ರಸಕ್ತ ಸಾಲಿನಿಂದ ಈ ಯೋಜನೆಯನ್ನು 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಿ 280 ಕೋಟಿ ರೂ.ಗಳ ವೆಚ್ಚದಲ್ಲಿ 60 ಲಕ್ಷ ಮಕ್ಕಳಿಗೆ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.

ರಾಜ್ಯದ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉತ್ತಮ ಸೌಲಭ್ಯಗಳನ್ನು ನೀಡಲು ಶಾಲಾ ಕೊಠಡಿಗಳಿಗೆ 310 ಕೋಟಿ ರೂ.ಗಳು ಹಾಗೂ ಪದವಿ ಪೂರ್ವ ಕಾಲೇಜು ಕೊಠಡಿಗಳಿಗೆ 240 ಕೋಟಿ ರೂ. ಸೇರಿದಂತೆ ಒಟ್ಟು 550 ಕೋಟಿ ರೂ.ಗಳ ವೆಚ್ಚದಲ್ಲಿ 8,311 ಕೊಠಡಿಗಳ ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುತ್ತದೆ. ವಿದ್ಯಾರ್ಥಿಗಳ ಶಿಕ್ಷಣ ಮತ್ತು ಆರೋಗ್ಯದ ದೃಷ್ಟಿಯಿಂದ, ಮಕ್ಕಳ ಸಂಖ್ಯೆಗೆ ಅನುಗುಣವಾಗಿ, ಕಡಿಮೆ ಶೌಚಾಲಯಗಳಿರುವ 5,775 ಶಾಲೆಗಳಲ್ಲಿ ಹಾಗೂ 150 ಕಾಲೇಜುಗಳಲ್ಲಿ ಶೌಚಾಲಯ ಘಟಕಗಳನ್ನು ನರೇಗಾ ಯೋಜನೆಯ ಸಂಯೋಜನೆಯೊಂದಿಗೆ 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು ಎಂದಿದ್ದಾರೆ.

ಹಳೆಯ ಶಾಲಾ ಕಾಲೇಜು ಕಟ್ಟಡಗಳು ಹಾಗೂ ಮಳೆಯಿಂದಾಗಿ ಶಿಥಿಲಗೊಂಡಿರುವ 3,833 ಶಾಲೆಗಳು ಹಾಗೂ 724 ಪದವಿ ಪೂರ್ವ ಕಾಲೇಜು ಕೊಠಡಿಗಳನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ದುರಸ್ತಿಗೊಳಿಸುವ ಮೂಲಕ ಬಳಕೆಗೆ ಯೋಗ್ಯಗೊಳಿಸಲಾಗುವುದು. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಾಗಿ ನೀಡುತ್ತಿರುವ ಅನುದಾನವನ್ನು ಕನಿಷ್ಠ 20,000 ರೂ. ದಿಂದ 45,000 ರೂ. ಗಳವರೆಗೆ ಹೆಚ್ಚಿಸಿ 47,272 ಶಾಲೆಗಳು ಹಾಗೂ 1,231 ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ ಒಟ್ಟಾರೆಯಾಗಿ 153 ಕೋಟಿ ರೂ. ಅನುದಾನ ಒದಗಿಸಲಾಗುವುದು. ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ನ್ಯೂನತೆಯನ್ನು ಹೋಗಲಾಡಿಸಲು ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಬಲವರ್ಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ʻಮರುಸಿಂಚನʼ ಎಂಬ ಹೊಸ ಯೋಜನೆಯಡಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಒಂದೂವರೆ ಲಕ್ಷ ವಿದ್ಯಾರ್ಥಿಗಳನ್ನು ಪ್ರೌಢ ಹಂತದ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ವಿಶೇಷ ತರಬೇತಿಯನ್ನು ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯಲ್ಲಿನ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸುವ ಸ್ಯಾಟ್ಸ್ ತಂತ್ರಾಂಶವನ್ನು SATS 2.0 ಎಂದು ಉನ್ನತೀಕರಿಸಲಾಗುವುದು. ಹೊಸ ಕಲ್ಪನೆಯನ್ನು ವಾಸ್ತವಕ್ಕೆ ತರಲು ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಮಾಧ್ಯಮಿಕ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಇನ್ನೋವೇಶನ್‌ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು. 2023-24ನೇ ಸಾಲಿನಲ್ಲಿ ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ ನಾಲ್ಕು ಪ್ರಯೋಗಾಲಯಗಳನ್ನು ಎರಡು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುತ್ತದೆ.

ಇನ್ನು ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಸ್ಥಳಾವಕಾಶವುಳ್ಳ ಶಾಲೆಗಳ ಸುತ್ತಮುತ್ತ ಒಂದು ವರ್ಷದ ಕಾಲಾವಧಿಯಲ್ಲಿ 50 ಲಕ್ಷ ಸಸಿಗಳನ್ನು ನೆಡುವ ವಿನೂತನ ʻಸಸ್ಯ ಶ್ಯಾಮಲʼ ಕಾರ್ಯಕ್ರಮವನ್ನು ಘೋಷಿಸಿದ್ದಾರೆ. ರಾಜ್ಯದ ಸಾಹಿತಿಗಳ ಹಾಗೂ ಪ್ರಕಾಶಕರ ಬೇಡಿಕೆಗಳಿಗೆ ಸ್ಪಂದಿಸಿ ಸಾರ್ವಜನಿಕ ಗ್ರಂಥಾಲಯಗಳಿಗೆ ಉತ್ತಮ ಪುಸ್ತಕಗಳನ್ನು ಖರೀದಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ ಒದಗಿಸಲಾಗುವುದು.

ಇದನ್ನೂ ಓದಿ : Karnataka Budget 2023 : ಎತ್ತಿನಹೊಳೆ ಯೋಜನೆಗೆ ವೇಗ : ಯೋಜನೆಯ 23,252 ಕೋಟಿ ರೂ. ಮೀಸಲು

ಇದನ್ನೂ ಓದಿ : Karnataka Budget 2023 : ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಾಸ್‌

ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದೆ. ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ. ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ನಿಟ್ಟಿನಲ್ಲಿ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ಘೋಷಿಸಿದ್ದಾರೆ.

Karnataka Budget 2023: Syllabus revision, two days a week for 10th class students: What did the education sector get in the state budget?

Comments are closed.