ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಜೊತೆ 8 ಸಚಿವರ ಪ್ರಮಾಣ ವಚನ

ಬೆಂಗಳೂರು : (Karnataka CM Oath Taking) ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಇಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಮಧ್ಯಾಹ್ನ 12.30 ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆ ಶಿವಕುಮಾರ್‌ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಜೊತೆಗೆ ಎಂಟು ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಎಐಸಿಸಿ ಬಿಡುಗಡೆ ಮಾಡಿರುವ ಪಟ್ಟಿಯ ಪ್ರಕಾರ ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಡಾ.ಜಿ.ಪರಮೇಶ್ವರ್‌, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್‌, ಎಂ.ಬಿ ಪಾಟೀಲ್‌, ಸತೀಶ್‌ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ರಾಮಲಿಂಗ ರೆಡ್ಡಿ, ಜಮೀರ್‌ ಅಹ್ಮದ್‌ ಖಾನ್‌ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗುತ್ತಿರುವ ಸಿದ್ದರಾಮಯ್ಯ ಅವರ ಜೊತೆಗೆ ೨೮ ಮಂದಿ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿಬಂದಿತ್ತು. ಮುಖ್ಯಮಂತ್ರಿ ಹುದ್ದೆಯ ಗೊಂದಲ ಪರಿಹಾರ ಬೆನ್ನಲ್ಲೇ ನಿನ್ನೆ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರು ಕಾಂಗ್ರೆಸ್‌ ಹೈಕಮಾಂಡ್‌ ನಾಯಕರ ಜೊತೆಗೆ ಚರ್ಚೆಯನ್ನು ಮಾಡಿ ಮೊದಲ ಹಂತದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿರುವ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿದ್ದರು. ಮೊದಲ ಹಂತದಲ್ಲಿಯೇ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಲಕ್ಷ್ಮಣ ಸವದಿ ಹಾಗೂ ಜಗದೀಶ್‌ ಶೆಟ್ಟರ್‌ ಅವರನ್ನೂ ಕೂಡ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು.

ಪದಗ್ರಹಣ ಸಮಾರಂಭದಲ್ಲಿ ದೇಶದ ಹಲವು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ. ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌, ಬಿಹಾರ ಮುಖ್ಯಮಂತ್ರಿ ನಿತೇಶ್‌ ಕುಮಾರ್‌, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಶ್ವಿಂದರ್‌ ಸಿಂಗ್‌ ಸುಖು, ಪುದುಚೇರಿ ಮುಖ್ಯಮಂತ್ರಿ ಎನ್.‌ ರಂಗಸ್ವಾಮಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌, ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಮುಂತಾದವರು ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.

ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆ ಏರುತ್ತಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಮಾಣ ವಚನ ಸಮಾರಂಭವನ್ನು ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ. ಸಮಾರಂಭದಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಗಣ್ಯರಿಗೆ ವಿಶೇಷ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ವಿಐಪಿಗಳಿಗೆ ಪ್ರತ್ಯೇಕ ಗೇಟ್‌ ತೆರೆಯಲಾಗಿದೆ. ಇನ್ನು ಸಾರ್ವಜನಿಕರಿಗೆ ಸಮಾರಂಭಕ್ಕೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಅಹಿತಕರ ಘಟನೆಗಳು ನಡೆಯದಂತೆ ಕಂಠೀರವ ಕ್ರೀಡಾಂಗಣದ ಸುತ್ತಲೂ ಬಿಗಿ ಪೊಲೀಸ್‌ ಭದ್ರತೆಯನ್ನು ಒದಗಿಸಲಾಗಿದೆ. ಭದ್ರತೆಗಾಗಿ ೧೫೦೦ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.

Karnataka CM Oath Taking : ವಾಹನ ನಿಲುಗಡೆ

ಸೈಂಟ್‌ ಜೋಸೆಪ್‌ ಕಾಲೇಜು ಮೈದಾನದಲ್ಲಿ ಗಣ್ಯರ ವಾಹನ ನಿಲುಗಡೆಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಇತರ ವಾಹನಗಳು ಬಿಬಿಎಂಪಿ ಮುಖ್ಯ ಕಚೇರಿಯ ಆವರಣ, ಬಾದಾಮಿ ಹೌಸ್‌, ಯುನೈಟೆಡ್‌ ಮಿಷನ್‌ ಕಾಲೇಜು ಮೈದಾನದಲ್ಲಿ ನಿಲ್ಲಿಸಲು ಸೂಚಿಲಾಗಿದೆ. ಅಲ್ಲದೇ ವಾಹನ ಸಂಚಾರಕ್ಕೆ ತೊಡಕಾಗ ಬಾರದು ಅನ್ನೋ ಕಾರಣಕ್ಕೆ ಕಸ್ತೂರ್‌ ಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಸಾರ್ವಜನಿಕರ ವಾಹನಗಳನ್ನು ಅರಮನೆ ಮೈದಾನದಲ್ಲಿ ನಿಲ್ಲಿಸುವಂತೆ ಸೂಚಿಸಲಾಗಿದೆ.

ಚುನಾವಣೆಯ ಪೂರ್ಣವದಲ್ಲಿ ಕಾಂಗ್ರೆಸ್‌ ಪಕ್ಷ ಹಲವು ಭರವಸೆಗಳನ್ನು ನೀಡಿದೆಯಾದರೂ, ಅಧಿಕಾರಕ್ಕೆ ಬಂದ ಮೊದಲ ಕ್ಯಾಬಿನೆಟ್‌ ಸಭೆಯಲ್ಲಿಯೇ ಪ್ರಮುಖ ಐದು ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಕೊಟ್ಟಿತ್ತು. ಇಂದು ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸಮಾರಂಭದ ಬಳಿಕ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದೆ. ಇಂದೇ ಐದು ಪ್ರಮುಖ ಬೇಡಿಕೆಗಳನ್ನು ಕಾಂಗ್ರೆಸ್‌ ಸರಕಾರ ಘೋಷಣೆ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ : ಲೋಕಸಭಾ ಚುನಾವಣೆ : ಚಿಕ್ಕಮಗಳೂರು – ಉಡುಪಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕೆ.ಜಯಪ್ರಕಾಶ್‌ ಹೆಗ್ಡೆ

ಇದನ್ನೂ ಓದಿ : ಪ್ರದೀಪ್‌ ಈಶ್ವರ್‌ ಸಾಕು ತಾಯಿ ರತ್ನಮ್ಮ ವಿಧಿವಶ

ಕಾಂಗ್ರೆಸ್‌ ಕೊಟ್ಟಿರುವ ಐದು ಭರವಸೆಗಳು :

  1. ಗೃಹಿಣಿಯರಿಗೆ ತಿಂಗಳಿಗೆ 2,000 ರೂ.
  2. 200 ಯುನಿಟ್ ಉಚಿತ ವಿದ್ಯುತ್
  3. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ
  4. ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ
  5. ನಿರುದ್ಯೋಗಿಗಳಿಗೆ ತಿಂಗಳಿಗೆ 3,000 ಹಾಗೂ 1,500 ನಿರುದ್ಯೋಗಿ ಭತ್ಯೆ

Comments are closed.