11 ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ : ಬಸ್, ಮೆಟ್ರೋ ಸಂಚಾರಕ್ಕಿಲ್ಲ ಅವಕಾಶ : ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಹೆಚ್ಚಾಗಿರುವ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಲಾಕ್ ಡೌನ್ ಆದೇಶ ತೆರವು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಲಾಕ್ ಡೌನ್ ತೆರವು ಮಾಡುವ ನಿಟ್ಟಿನಲ್ಲಿ ಸಿಎಂ ಯಡಿಯೂರಪ್ಪ ಇಂದು ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕೊರೊನಾ ಲಾಕ್ ಡೌನ್ ತೆರವು ಮಾಡುವುದು ಬೇಡ ಎಂದು ಸೂಚನೆಯನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಬೆಳಗಾವಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿ ಕಠಿಣ ಲಾಕ್ ಡೌನ್ ಆದೇಶವನ್ನು ಮುಂದುವರಿಸ ಲಾಗುತ್ತಿದ್ದು, ಈಗಿರುವ ಮಾರ್ಗಸೂಚಿಗಳನ್ನೇ ಮುಂದುವರಿಸಲಾಗುತ್ತದೆ. ಉಳಿದ ಜಿಲ್ಲೆಗಳಲ್ಲಿ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಆದೇಶ ಮುಂದುವರಿಯಲಿದ್ದು, ಲಾಕ್ ಡೌನ್ ಆದೇಶದಲ್ಲಿ ಹಲವು ವಿನಾಯಿತಿಗಳನ್ನು ಘೋಷಣೆ ಮಾಡಿದ್ದಾರೆ.

ಲಾಕ್ ಡೌನ್ ತೆರವು ಮಾಡಲಾಗುತ್ತಿದ್ದರೂ ಕೂಡ ಮೆಟ್ರೋ, ಕೆಎಸ್ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ಬಸ್ ಸಂಚಾರಕ್ಕೆ ಅವಕಾಶವಿಲ್ಲ. ಅಲ್ಲದೇ ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2 ಗಂಟೆಯವರೆಗೂ ಅವಕಾಶವನ್ನು ಕಲ್ಪಿಸಲಾಗಿದೆ. ಅಷ್ಟೇ ಅಲ್ಲಾ ಮದ್ಯ ಮಾರಾಟಕ್ಕೆ ಕೂಡ ಮಧ್ಯಾಹ್ನ 2 ಗಂಟೆಯ ವರೆಗೆ ತೆರೆಯಲಿವೆ, ಇನ್ನು ಕೈಗಾರಿಕಾ ವಲಯಕ್ಕೆ ವಿನಾಯಿತಿಯನ್ನು ನೀಡಲಾಗಿದ್ದು, ಶೇ.50 ಸಿಬ್ಬಂದಿಯೊಂದಿಗೆ ಕೈಗಾರಿಕೆಗಳು ಕಾರ್ಯನಿರ್ವಹಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇನ್ನು ಶೇ.30ರಷ್ಟು ಸಿಬ್ಬಂದಿಯೊಂದಿಗೆ ಗಾರ್ಮೆಂಟ್ಸ್, ಹಾಗೂ ಶೇ.50 ರಷ್ಟು ಸಿಬ್ಬಂದಿಗಳೊಂದಿಗೆ ಸರಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ.

ಬಸ್ ಸಂಚಾರಕ್ಕೆ ಅವಕಾಶವಿಲ್ಲದಿದ್ದರೂ ಕೂಡ ಟ್ಯಾಕ್ಸಿ ಹಾಗೂ ಆಟೋ ರಿಕ್ಷಾಗಳಲ್ಲಿ ಸಂಚಾರ ಮಾಡಬಹುದಾಗಿದೆ. ಆದರೆ ಆಟೋಗಳಲ್ಲಿ ಇಬ್ಬರು ಮಾತ್ರವೇ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಇನ್ನು ವೀಕೆಂಡ್ ಕರ್ಪ್ಯೂ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಮುಂದುವರಿಯಲಿದೆ

Comments are closed.