ರಾಜ್ಯದಲ್ಲಿ ಲಾಕ್ ಡೌನ್ ಇಲ್ಲ : ಜನತಾ ಕರ್ಪ್ಯೂ ಮುಂದುವರಿಕೆ : ಸಿಎಂ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆ ಸದ್ಯಕ್ಕೆ ಇಲ್ಲ. ಜನತಾ ಕರ್ಪ್ಯೂ ಜಾರಿಯಲ್ಲಿದ್ದು, ಮೇ 10ರ ನಂತರದಲ್ಲಿ ಆ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸಚಿವ ಸಂಪುಟ ಸಭೆಯ ನಂತರದಲ್ಲಿ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ತಡೆಯುವ ನಿಟ್ಟಿನಲ್ಲಿ ಅಗತ್ಯಕ್ರಮಗಳನ್ನು ಕೈಗೊಂಡಿದ್ದೇವೆ. ಆಯಾಯ ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗಿದೆ. ಅಲ್ಲದೇ ನಾಳೆಯಿಂದಲೇ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗಳಲ್ಲಿಗೆ ತೆರಳುವಂತೆ ಸೂಚನೆಯನ್ನು ನೀಡಲಾಗಿದೆ.

ರಾಜ್ಯದಲ್ಲಿ ಆಮ್ಲಜನಕ ಕೊರತೆಯನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಆಕ್ಸಿಜನ್ ವಿತರಕರ ಜೊತೆಯಲ್ಲಿಯೂ ಸಭೆಯನ್ನು ನಡೆಸಲಾಗಿದೆ. ಅಲ್ಲದೇ ಕೇಂದ್ರ ಸರಕಾರಕ್ಕೆ ಆಕ್ಸಿಜನ್ ಪೂರೈಕೆಯ ಬಗ್ಗೆ ಮನವಿಯನ್ನು ಮಾಡಲಾಗಿದೆ. ಇನ್ನು ಕೊರೊನಾ ಔಷಧವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿರುವ ಆರೋಪ ಕೇಳಿಬಂದಿದ್ದು, ಕ್ರಮಕೈಗೊಳ್ಳುವಂತೆ ಸೂಚನೆಯನ್ನು ನೀಡಲಾಗಿದೆ ಎಂದರು.

ಸಚಿವರಿಗೆ ಕೊರೊನಾ ನಿರ್ವಹಣೆಯ ಹೊಣೆಯನ್ನು ಹಂಚಿಕೆಯನ್ನು ಮಾಡಲಾಗಿದೆ. ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಆಮ್ಲಜನಕ ಸರಬರಾಜು ಕುರಿತು ಕೇಂದ್ರದೊಂದಿಗೆ ಸಂಪರ್ಕ ಸಾಧಿಸಿ ಆಮ್ಲಜನಕ ಕೊರತೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡಲಾಗಿದೆ. ಔಷಧಿ ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಅವರಿಗೆ ನೀಡಲಾಗಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಬೆಡ್ ಕೊರತೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ. ಅಲ್ಲದೇ ಕೊರೊನಾ ನಿಯಂತ್ರಣದ ನಿಟ್ಟಿನಲ್ಲಿ ಆರೋಗ್ಯ ಸಿಬ್ಬಂದಿಗಳ ನೇಮಕಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬೆಡ್ ಬ್ಲಾಕಿಂಗ್ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ ಅವರು ಬಯಲಿಗೆ ತಂದಿದ್ದಾರೆ. ಈ ದಂಧೆಯ ಕುರಿತು ಚರ್ಚೆಯನ್ನು ನಡೆಸುತ್ತೇನೆ. ಇದರಲ್ಲಿ ಯಾರೇ ಬಾಗಿಯಾಗಿದ್ದರೂ ಕೂಡ ನಿರ್ಧಾಕ್ಷೀಣ್ಯವಾಗಿ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದಿದ್ದಾರೆ. ಅಲ್ಲದೇ ಚಾಮರಾಜನಗರ ದುರಂತದ ಕುರಿತು ತನಿಖೆಗೆ ಆದೇಶವನ್ನು ನೀಡಿದ್ದು, ಮೂರು ದಿನಗಳ ಒಳಗಾಗಿ ವರದಿ ನೀಡುವಂತೆ ಸೂಚನೆಯನ್ನು ನೀಡಿದ್ದೇನೆ. ವರದಿ ಬಂದ ನಂತರದಲ್ಲಿ ಕ್ರಮವನ್ನು ಕೈಗೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.

Comments are closed.