ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆತಂಕದ ನಡುವಲ್ಲೇ ದೇಶದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿದೆ. ಇದೀಗ ಪೆಟ್ರೋಲ್ ಬೆಲೆ ಏರಿಕೆಯ ಬಿಸಿ ಇದೀಗ ಕರ್ನಾಟಕಕ್ಕೂ ತಟ್ಟಿದ್ದು, ರಾಜ್ಯದಲ್ಲಿಯೂ ಪೆಟ್ರೋಲ್ ಬೆಲೆ 100 ರೂ. ಗಡಿದಾಟಿದೆ.
ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಡಾಖ್‌ಗಳಲ್ಲಿ ಈಗಾಗಲೇ ಪೆಟ್ರೋಲ್ ದರ 100ರ ಗಡಿದಾಟಿದ್ದು, ಇದೀಗ ಕರ್ನಾಟಕದ ಬಳ್ಳಾರಿ, ದಾವಣಗೆರೆ, ಶಿರಸಿಯಲ್ಲಿ ಪೆಟ್ರೋಲ್ ದರ ಈಗಾಗಲೇ 100 ರೂಪಾಯಿ ಗಡಿದಾಟಿದೆ. ಅಲ್ಲದೇ ಹಲವು ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ನೂರರ ಗಡಿಯಲ್ಲಿದ್ದು ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಮಾಡಲಾಗುತ್ತಿದೆ. ಇದೀಗ ಮೇ ತಿಂಗಳಿನಿಂದ ಇಲ್ಲಿಯವರೆಗೆ ಒಟ್ಟು 20 ಬಾರಿ ಪೆಟ್ರೋಲ್ ದರವನ್ನು ಏರಿಕೆ ಮಾಡಲಾಗಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ದರ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ.