Karnataka Weather Report : ರಾಜ್ಯದಲ್ಲಿ ನ.23ರ ವರೆಗೆ ಭಾರೀ ಮಳೆ : ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಬೆಂಗಳೂರು : ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಅವಾಂತರವೇ ಸೃಷ್ಟಿಯಾಗಿದೆ. ರಾಜ್ಯದಲ್ಲಿ ನವೆಂಬರ್‌ 23 ರ ವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ. ಅದ್ರಲ್ಲೂ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೇ ರಾಜ್ಯದ 11 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿನ ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ರಾಜ್ಯದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉಳಿದಂತೆ ಮಂಡ್ಯ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಶಾಲೆಗಳಿಗೆ ರಜೆ ಘೋಷಣೆ

ನಿರಂತರವಾಗಿ ಸುರಿಯುತ್ತಿರುವ ಮಳೆಯ ಜೊತೆಗೆ ಮುಂದಿನ ಎರಡು ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಭೀತಿಯ ಹಿನ್ನೆಲೆಯಲ್ಲಿ ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಶಾಲೆಗಳಿಗೆ ರಜೆಯನ್ನೂ ಘೋಷಣೆ ಮಾಡಿ ಜಿಲ್ಲಾಡಳಿತಗಳು ಆದೇಶ ಹೊರಡಿಸಿವೆ. ಅಲ್ಲದೇ ಮಳೆ ಪರಿಸ್ಥಿತಿಯನ್ನು ನೋಡಿಕೊಂಡು ಶಾಲೆಗಳಿಗೆ ರಜೆ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಡಿಡಿಪಿಐಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಇದನ್ನೂ ಓದಿ : Snake head breakfast : ಉಪಹಾರದಲ್ಲಿ ಹಾವಿನ ತಲೆ ಪತ್ತೆ : 50 ಕ್ಕೂ ಅಧಿಕ ಹಾಸ್ಟೆಲ್‌ ವಿದ್ಯಾರ್ಥಿಗಳು ಅಸ್ವಸ್ಥ

ಇದನ್ನೂ ಓದಿ :  ಭಾರೀ ಮಳೆ ಹಿನ್ನೆಲೆ : ಎರಡು ದಿನ ಶಾಲೆಗಳಿಗೆ ರಜೆ ಘೋಷಣೆ

( Coastal Karnataka and malnad area red alert 11 districts orange alert till November 23rd Heavy Rain in Karnataka)

Comments are closed.