Karnataka Rains : ಕರಾವಳಿ, ಮಲೆನಾಡಿನಲ್ಲಿ ಎರಡು ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದಲೂ ಭಾರೀ ಮಳೆ ಸುರಿಯುತ್ತಿದೆ. ಅಲ್ಲದೇ ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿಯೂ ಮಳೆಯ ಆರ್ಭಟ ಜೋರಾಗಿದೆ. ಈ ನಡುವಲ್ಲೇ ಇಂದು ಮತ್ತು ನಾಳೆ ಮಲೆನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ.

ಅಲ್ಲದೇ ಸಿಲಿಕಾನ್‌ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದ್ದು ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕಳೆದ 24 ಗಂಟೆಯಲ್ಲಿ ಕಾರ್ಕಳ ತಾಲೂಕಿನಲ್ಲಿ ಭಾರೀ ಮಳೆ ಸುರಿದಿದೆ. ಕಾರ್ಕಳ ತಾಲೂಕಿನ ರೇಂಜಾಳದಲ್ಲಿ ಬರೋಬ್ಬರಿ 120 ಮಿ.ಮೀ. ಮಳೆಯಾಗಿದ್ದರೆ, ಬೆಂಗಳೂರಿನ ಬೊಮ್ಮನಹಳ್ಳಿಯ ಸಿಂಗಸಂದ್ರದಲ್ಲಿ 13 ಮಿ.ಮೀ. ಮಳೆಯಾಗಿದೆ.

ಇದನ್ನೂ ಓದಿ :  ಗಡಿ ಜಿಲ್ಲೆಗಳಲ್ಲಿ ವೀಕೆಂಡ್‌ ಲಾಕ್‌ಡೌನ್‌ : ರಾಜ್ಯದಾದ್ಯಂತ ನೈಟ್‌ ಕರ್ಪ್ಯೂ ವಿಸ್ತರಣೆ : ಸಿಎಂ ಬೊಮ್ಮಾಯಿ

ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲೂ ಸಾಧಾರಣ ಮಳೆಯಾಗಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ವಿದ್ದು, ಮಳೆ ಸುರಿಯುವ ಸಾಧ್ಯತೆಯಿದೆ.

(Karnataka Weather Updates : Two days of heavy rain on the coastal districts and malenadu)

Comments are closed.