Mangalore Night Curfew : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈಟ್‌ ಕರ್ಪ್ಯೂ : ಇಂದು ಶಾಂತಿ ಸಭೆ, ಕರಾವಳಿಯಲ್ಲಿ3 ದಿನ ಕಠಿಣ ಸ್ಥಿತಿ

ಮಂಗಳೂರು : (Mangalore Night Curfew ) ಪ್ರವೀಣ್‌ ನೆಟ್ಟಾರು, ಫಾಜಿಲ್‌ ಹತ್ಯೆಯ ಬೆನ್ನಲ್ಲೇ ಪ್ರಕ್ಷುಬ್ದವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿದೆ. ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ನೈಟ್‌ ಕರ್ಪ್ಯೂ ಜಾರಿ ಮಾಡಲಾಗಿದ್ದು, ಪೊಲೀಸ್‌ ಹೈ ಅಲರ್ಟ್‌ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ, ಸುರತ್ಕಲ್‌ನಲ್ಲಿ ನಡೆದ ಹತ್ಯೆ ಕರಾವಳಿಗರನ್ನು ಬೆಚ್ಚಿ ಬೀಳಿಸಿದೆ. ಘಟನೆಯ ಬೆನ್ನಲ್ಲೇ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್‌ ಕುಮಾರ್‌ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಗುಪ್ತಚರ ಇಲಾಖೆಯ ಮಾಹಿತಿಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮೂರು ದಿನ ಕಠಿಣ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಹಲವು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಜಿಲ್ಲೆಯಾದ್ಯಂತ ಅಗಸ್ಟ್‌ 6 ರ ವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನೈಟ್‌ ಕರ್ಪ್ಯೂ ಜಾರಿಗೊಳಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮಾತ್ರವೇ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಾದ್ಯಂತ 2 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಕೋಮುಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದಾರೆ. ಜಿಲ್ಲೆಯ ಗಲ್ಲಿ ಗಲ್ಲಿಗಳಲ್ಲಿಯೂ ಖಾಕಿ ಹದ್ದಿನ ಕಣ್ಣು ಇರಿಸಲಾಗಿದ್ದು, ಜಿಲ್ಲೆಯಾದ್ಯಂತ ಚೆಕ್‌ ಪೋಸ್ಟ್‌ಗಳನ್ನು ತೆರೆದು ಜಿಲ್ಲೆಯೊಳಗೆ ಪ್ರವೇಶವಾಗುವ ಎಲ್ಲಾ ವಾಹನಗಳ ಮೇಲೆಯೂ ನಿಗಾ ಇರಿಸಲಾಗಿದೆ. ಹೊರ ಜಿಲ್ಲೆಗಳಿಂದ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ಕರೆಯಿಸಿಕೊಳ್ಳಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಾಂತಿ ಸಭೆ ನಡೆಯಲಿದೆ. ಸಭೆಯಲ್ಲಿ ರಾಜಕೀಯ ಮುಖಂಡರು, ಧಾರ್ಮಿಕ ಮುಖಂಡರು ಬಾಗಿಯಾಗಲಿದ್ದಾರೆ. ಜಿಲ್ಲೆಯಾದ್ಯಂತ ಜನರು ಶಾಂತಿ ಕಾಪಾಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಈಗಾಗಲೇ ಎನ್‌ಐಎ ತನಿಖೆಗೆ ವಹಿಸಿದೆ. ಇನ್ನೊಂದೆಡೆಯಲ್ಲಿ ಫಾಜಿಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿ ಯನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದು ವಿಚಾರಣೆಯನ್ನು ನಡೆಸುತ್ತಿದ್ದಾರೆ. ಸಿಸಿ ಕ್ಯಾಮರಾ ದೃಶ್ಯಾವಳಿ, ಸ್ಥಳೀಯರು ನೀಡಿರುವ ಮಾಹಿತಿಯ ಆಧಾರದ ಮೇಲೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ : Shivamogga Harsha Praveen Nettar : ಅಧಿಕಾರಕ್ಕೇರೋ ಕನಸಿಗೆ ಸಾಲು ಸಾಲು ಕೊಲೆ ಅಡ್ಡಿ: ಬಿಜೆಪಿಗೆ ಕಂಟಕವಾದ ಪ್ರವೀಣ್, ಹರ್ಷ ಕೊಲೆ‌ ಕೇಸ್

ಇದನ್ನೂ ಓದಿ : Heavy Rain School Holiday : ಭಾರೀ ಮಳೆ ಮಂಗಳೂರು, ಮೂಡಬಿದಿರೆ, ಬಂಟ್ವಾಳ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ

Mangalore Night Curfew Peace meeting today, 3 days tough situation on the coast

Comments are closed.