Sringeri : ಚುನಾವಣಾ ಕರ್ತವ್ಯ ಲೋಪ : ಶೃಂಗೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಅಮಾನತ್ತು

ಚಿಕ್ಕಮಗಳೂರು : ಚುನಾವಣಾ ಕಾರ್ಯಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯವಹಿಸುವ ಮೂಲಕ ಕರ್ತವ್ಯ ಲೋಪವನ್ನುಂಟು ಮಾಡಿದ್ದು ಮಾತ್ರವಲ್ಲ, ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ (Sringeri) ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಪುಟ್ಟೇಗೌಡ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ – 2023 ಕ್ಕೆ ಸಂಬಂಧಿಸಿದಂತೆ (Sringeri) ತಾಲ್ಲೂಕು ಕಾರ್ಯ ನಿರ್ವಾಹಣಾಧಿಕಾರಿ ಪುಟ್ಟೇಗೌಡ ಅವರಿಗೆ ನಿಯೋಜಿಸಿದ್ದ ಕೆಲಸ ಕಾರ್ಯ ಗಳನ್ನು ಸರಿಯಾಗಿ ಮಾಡದೇ ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯ ಲೋಪ ಮಾಡಿದ್ದಾರೆ ಮತ್ತು ಮಹಿಳಾ ಸಿಬ್ಬಂದಿಗಳ ಮುಂದೆ ಅವಾಚ್ಯ ಮತ್ತು ತೀರಾ ಆಶ್ಲೀಲ ಪದಗಳನ್ನು ಬಳಸಿ ಅವರುಗಳಿಗೆ ಮುಜುಗರವಾಗುವಂತೆ ಮನಬಂದಂತೆ ಮಾತನಾಡಿದ್ದು, ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದರಿಂದ ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 28 (ಎ) ಮತ್ತು 136ರಡಿ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.

ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

ಚಿಕ್ಕಮಗಳೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮೇ 10 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ತಿಳಿಸಿದರು. ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ 9,73,000 ಮತದಾರರಿದ್ದಾರೆ, 1,224 ಮತಗಟ್ಟೆಗಳಿದ್ದು, ಎಲ್ಲಾ ಮತಗಟ್ಟೆಗಳಲ್ಲೂ ಮತದಾನಕ್ಕೆ ಸಿದ್ಧತೆ ಮಾಡಲಾಗಿದೆ. 1,700 ಕ್ಕಿಂತ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು 5,756 ಸಿಬ್ಬಂದಿಗಳು ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲಿದ್ದು, ಮತಗಟ್ಟೆಗಳಿಗೆ ಇಂದು ಮತದಾನ ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ. ಮತಗಟ್ಟೆಗಳಲ್ಲಿ ಸಿಬ್ಬಂದಿಗಳಿಗೆ ತೊಂದರೆಯಾಗದಂತೆ ಎಲ್ಲಾ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳ ನೇತೃತ್ವದಲ್ಲಿ ಸಿಬ್ಬಂದಿಗಳಿಗೆ ಊಟ ತಿಂಡಿ ವ್ಯವಸ್ಥೆ ಮಾಡಲಾಗಿದೆ. ಸಿಬ್ಬಂದಿಗಳು ಮತಗಟ್ಟೆಗೆ ಹೋದ ಕೂಡಲೇ ಸ್ಥಳೀಯ ಅಧಿಕಾರಿಗಳು ಅವರನ್ನು ಸ್ವಾಗತಿಸುವರು. ಸಣ್ಣ ಪುಟ್ಟ ಸಮಸ್ಯೆಗಳಿದ್ದರೆ ಅಧಿಕಾರಿಗಳಿಗೆ ತಿಳಿಸಿದರೆ ಸಮಸ್ಯೆ ಬಗೆಹರಿಸುವರು ಎಂದರು.

ಅಗತ್ಯ ಬಂದೋ ಬಸ್ತ್‌ಗಾಗಿ 17 ಪ್ಯಾರ ಮಿಲಿಟರಿ ಪಡೆಗಳು ಆಗಮಿಸಿವೆ ಅಲ್ಲದೆ 1,700 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು. ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಉಪಸ್ಥಿತರಿದ್ದರು.

ಇದನ್ನೂ ಓದಿ : ಕರ್ನಾಟಕ ವಿಧಾನಸಭಾ ಚುನಾವಣೆ : ಮತದಾನಕ್ಕೆ ಸಕಲ ಸಿದ್ದತೆ, ಬಿಗಿ ಭದ್ರತೆ

ಇದನ್ನೂ ಓದಿ : ಕರ್ನಾಟಕ ಚುನಾವಣೆ 2023 : ಮತದಾನದ ದಿನಾಂಕ, ಫಲಿತಾಂಶ, ಪ್ರಮುಖ ಕ್ಷೇತ್ರಗಳು ಇಲ್ಲಿದೆ ಸಂಪೂರ್ಣ ವಿವರ

Comments are closed.