ಬೆಂಗಳೂರು : ದಸರಾ ಹಬ್ಬಕ್ಕೆ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ಘೋಷಿಸಿದೆ. ಮುಜುರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಇಂದು ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯಲ್ಲಿ ಜಾರಿಗೆ ತಂದ ಹೊಸ ಯೋಜನೆಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಶಿಕಲಾ ಜೊಲ್ಲೆ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ನಾನು ಇಲಾಖೆಯ ಜವಾಬ್ದಾರಿ ತೆಗೆದುಕೊಂಡ ಮೇಲೆ ಅವರದ ರಕ್ಷಣೆಗೆ ವಿನೂತನ ವಿಮೆ ಯೋಜನೆ ಜಾರಿಗೊಳಿಸಿದ್ದು, ಅರ್ಚಕರು ಹಾಗೂ ಇಲಾಖೆ ನೌಕರರಿಗೆ ವಿಮೆ ಜಾರಿಗೆ ತರಲು ತೀರ್ಮಾನಿಸಿದ್ದೇನೆ. ಇದರಿಂದ ಮುಜರಾಯಿ ಇಲಾಖೆಯ ಸುಮಾರು 37,000 ಸಿಬ್ಬಂದಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.
ಇದನ್ನೂ ಓದಿ: Tatkal Tractor Loan : ಅನ್ನದಾತರಿಗೆ ಸಿಹಿ ಸುದ್ಧಿ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5ನೇವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಅರ್ಚಕರಿಗೆ 6ನೇವೇತನ ಆಯೋಗದ ವೇತನ ದೊರಕಿಸಿಕೊಡುವಂತೆ ಅರ್ಚಕರಿಂದ ಬಹಳ ದಿನಗಳಿಂದ ಬೇಡಿಕೆ ಇತ್ತು. ನಾನು ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಂತರ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತ್ವರಿತಗತಿಯಲ್ಲಿ ಅರ್ಚರಿಕರಿಗೆ 6ನೇ ವೇತನ ಆಯೋಗದ ವೇತನ ನೀಡಲು ತೀರ್ಮಾನಿಸಿದ್ದೇನೆ ಎಂದರು.
ಕೆಲವು ಷರತ್ತುಗಳನ್ನು ವಿಧಿಸಿ, ದೇವಾಲಯದ ವಾರ್ಷಿಕ ಆದಾಯದಲ್ಲಿ ನೌಕರರ ವೇತನ ಶೇ35%ರಷ್ಟು ಮೀರದಂತೆ ನೌಕರರನ್ನು 6ನೇವೇತನ ಆಯೋಗದ ವ್ಯಾಪ್ತಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗುತ್ತದೆ. ಇದರಿಂದ ಮುಜರಾಯಿ ಇಲಾಖೆಯ ಸುಮಾರು 1034 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಇದಕ್ಕೆ 20 ಕೋಟಿ ರೂ. ವೆಚ್ಚವಾಗಲಿದ್ದು, ಆಯಾ ದೇವಸ್ಥಾನಗಳ ಆದಾಯದಿಂದ ಒದಗಿಸಲಾಗುವುದು. ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ ಎಂದು ಸಚಿವರು ಹೇಳಿದರು. ಇನ್ನು ಮುಜರಾಯಿ ಇಲಾಖೆ ವ್ಯಾಾಪ್ತಿಗೆ ಒಳಪಡುವ ರಾಜ್ಯದ ಎಲ್ಲ ದೇವಸ್ಥಾನಗಳಆಸ್ತಿ ಮಾರ್ಗನಕ್ಷೆ, ಅಲ್ಲಿನ ಸೇವೆಗಳ ಸಂಪೂರ್ಣ ಮಾಹಿತಿಯನ್ನು ಆನ್‌ಲೈನ್ ಮೂಲಕ ತಿಳಿದುಕೊಳ್ಳುವಂತೆ ಐಟಿಎಂಎಸ್ (ಇಂಟಿಗ್ರೆಟೆಡ್ ಡೆವೆಲಪ್ ಮೆಂಟ್ ಮ್ಯಾನೇಜ್ ಮೆಂಟ್ ಸಿಸ್ಟಮ್) ಜಾರಿಗೆ ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.
(State Government announces massive contribution to Mujarai Department Priests and Employees)