ಮಾದಕ ದ್ರವ್ಯ ಪ್ರಕರಣ: ಪಿಐಟಿ-ಎನ್ಡಿಪಿಎಸ್ ಕಾಯ್ದೆಯಡಿ ಯುವಕ ಬಂಧನ
ಉಡುಪಿಯ ದೊಡ್ಡಣ್ಣಗುಡ್ಡೆ ನಿವಾಸಿ ಹಮೀದ್ ಅವರ ಪುತ್ರ ಅಬ್ದುಲ್ ರೌಫ್ (26) ಎಂಬಾತನನ್ನು ಪಿಐಟಿ-ಎನ್ಡಿಪಿಎಸ್ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.

ಉಡುಪಿ : ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಣ್ಣಗುಡ್ಡೆ ನಿವಾಸಿ ಹಮೀದ್ ಅವರ ಪುತ್ರ ಅಬ್ದುಲ್ ರೌಫ್ (26) ಎಂಬಾತನನ್ನು ಪಿಐಟಿ-ಎನ್ಡಿಪಿಎಸ್ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿ ಆಧರಿಸಿ, ಪಶ್ಚಿಮ ವಲಯ ಮಂಗಳೂರು ಪೊಲೀಸ್ ಮಹಾನಿರೀಕ್ಷಕರು ಮೇ 18ರಂದು ಬಂಧನ ಆದೇಶ ಹೊರಡಿಸಿದ್ದರು. ಅದರಂತೆ ಮೇ 19ರಂದು ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತನ ವಿರುದ್ಧ ಉಡುಪಿ ಜಿಲ್ಲೆಯ ಮಣಿಪಾಲ, ಉಡುಪಿ ನಗರ ಹಾಗೂ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ ತಲಾ ಒಂದು ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಧೂಮಪಾನಿಗಳಿಗೆ ಬಿಗ್ ಶಾಕ್: ಕೇಂದ್ರದ ಸುಂಕದ ಎಫೆಕ್ಟ್, ಸಿಗರೇಟ್ ಬೆಲೆ ಶೇ. 21ರಷ್ಟು ಭಾರಿ ಏರಿಕೆ!
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಇನ್ನೂ ಎರಡು ಪ್ರಕರಣಗಳು ದಾಖಲಾಗಿವೆ. ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಸೇವನೆಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.



