ಉಡುಪಿ: ತ್ರಾಸಿ ಬಳಿ ಪ್ರವಾಸಿ ಬಸ್ -ಟ್ಯಾಂಕರ್ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳ ಸಾವು, ಹಲವರಿಗೆ ಗಾಯ
ಪ್ರವಾಸಕ್ಕೆಂದು ಬಂದಿದ್ದ ಕಾಲೇಜು ವಿದ್ಯಾರ್ಥಿಗಳಿದ್ದ ಬಸ್, ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಅತಿ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಉಡುಪಿ: ಕರಾವಳಿಯ ಪ್ರಸಿದ್ಧ ಪ್ರವಾಸಿ ತಾಣವಾದ ತ್ರಾಸಿ ಬೀಚ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರವಾಸಕ್ಕೆಂದು ಬಂದಿದ್ದ ಕಾಲೇಜು ವಿದ್ಯಾರ್ಥಿಗಳಿದ್ದ ಬಸ್, ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಅತಿ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಶಂಕರಘಟ್ಟ ರಂಭಾಪುರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳು ಕರಾವಳಿ ಪ್ರವಾಸಕ್ಕೆ ಆಗಮಿಸಿದ್ದರು. ಮುರುಡೇಶ್ವರ ದರ್ಶನ ಮುಗಿಸಿ ಉಡುಪಿಯತ್ತ ಪ್ರಯಾಣಿಸುತ್ತಿದ್ದ ವೇಳೆ ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ಯಾಂಕರ್‌ಗೆ ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪ್ರಾಥಮಿಕ ಮಾಹಿತಿಯಂತೆ ಬಸ್ಸಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಅಪಘಾತದ ತೀವ್ರತೆಗೆ ಬಲಿಯಾಗಿದ್ದಾರೆ.
ಬಸ್ಸಿನಲ್ಲಿ ಸುಮಾರು 47 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಕುಂದಾಪುರದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಜಿಮ್‌ಗೆ ಸೇರಿದ ಪತ್ನಿ ಸೌಂದರ್ಯದ ಮೇಲೆ ಪತಿಗೆ ಅಸೂಯೆ! ಪತಿ ಮಾಡಿದ ಕೆಲಸ ಕೇಳಿದ್ರೆ ಬೆಚ್ಚಿಬೀಳ್ತೀರಾ!
ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳೀಯರು ಮತ್ತು ಪೊಲೀಸರು ತಕ್ಷಣವೇ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಬಸ್ ಅತಿ ವೇಗವಾಗಿ ಚಲಿಸುತ್ತಿದ್ದದ್ದೇ ಅಪಘಾತಕ್ಕೆ ಪ್ರಾಥಮಿಕ ಕಾರಣ ಎಂದು ಹೇಳಲಾಗುತ್ತಿದೆ. ರಸ್ತೆ ಬದಿ ಟ್ಯಾಂಕರ್ ನಿಂತಿದ್ದನ್ನು ಗಮನಿಸದೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಶೋಕ ಸಾಗರದಲ್ಲಿ ಭದ್ರಾವತಿ:
ಶೈಕ್ಷಣಿಕ ಪ್ರವಾಸಕ್ಕೆಂದು ಖುಷಿಯಿಂದ ಬಂದಿದ್ದ ವಿದ್ಯಾರ್ಥಿಗಳ ಬಾಳಿನಲ್ಲಿ ವಿಧಿ ಈ ರೀತಿ ಆಟವಾಡಿದ್ದು ತೀವ್ರ ವಿಷಾದನೀಯ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ವಿದ್ಯಾರ್ಥಿಗಳ ಪೋಷಕರು ಮತ್ತು ಕಾಲೇಜು ಮಂಡಳಿಯವರು ಆತಂಕಕ್ಕೊಳಗಾಗಿದ್ದಾರೆ. ಸದ್ಯ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗುವ ಪ್ರಕ್ರಿಯೆ ನಡೆಯುತ್ತಿದೆ.



